ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಏ.೪: ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಪ್ರತಿಯೊಂದು ಗ್ರಾಮಕ್ಕೆ ರಸ್ತೆ, ಚರಂಡಿ, ಡಿಜಿಟಲ್ ಗ್ರಂಥಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತಬೇಟೆ ನಡೆಸಿ ಮಾತನಾಡಿದ ಅವರು, ಹದಡಿ ಗ್ರಾಮದಲ್ಲಿರುವ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಜೊತೆಗೆ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದ್ದು, ಜನ ನನಗೆ ಬಹುಮತ ನೀಡಿ ಗೆಲ್ಲಿಸಿ, ಸಂಸತ್ತಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿದೆ. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿ ಅಥವಾ ಮೂರು-ನಾಲ್ಕು ಪಂಚಾಯಿತಿ ಒಳಗೊಂಡು ಒಂದು ಕೌಶಲ್ಯ ಅಭಿವೃದ್ಧಿ ಕೇಂದ್ರ ತೆರೆಯಲು ಚಿಂತನೆ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಜೊತೆ ಸ್ವ-ಉದ್ಯೋಗಕ್ಕೆ ಇದು ವರವಾಗಲಿದೆ ಎಂದರು.ಜಿ.ಎಂ.ಸಿದ್ಧೇಶ್ವರ್ ಅವರು ಸಂಸದರಾಗಿದ್ದಾಗ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ಧಾರೆ. ಮುಂದಿನ ದಿನಗಳಲ್ಲಿ ನಿಮ್ಮ ಮತ್ತು ನಿಮ್ಮ ಗ್ರಾಮಗಳ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡಿ.  30 ವರ್ಷಗಳಿಂದ ನಮ್ಮ ಕುಟುಂಬ ನಿಮ್ಮ ಸೇವೆ ಮಾಡಿಕೊಂಡು ಬರುತ್ತಿದೆ. ಬಹಳ ಜನ ಕೇಂದ್ರದಲ್ಲಿ ಮೋದಿ ಜೀ ಪ್ರಧಾನಿ ಆಗಬೇಕು, ದಾವಣಗೆರೆಯಲ್ಲಿ ಗಾಯಿತ್ರಿ ಸಿದ್ದೇಶ್ವರ್ ಸಂಸದರಾಗಬೇಕು ಅಂತ ನಿರ್ಧಾರ ಮಾಡಿದ್ಧಾರೆ. ಈಗಾಗಲೇ ನಮ್ಮ ಗೆಲುವು ನಿಶ್ಚಿತ ಎಂದರು.ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ರವೀಂದ್ರನಾಥ್ ಅವರ ಸಾರಥ್ಯದಲ್ಲಿ ಶಿರಮಗೊಂಡನಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮದಲ್ಲಿ ಜೊತೆಯಾಗಿ ಪ್ರಚಾರ ನಡೆಸಿದರು.ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯೆ ವೀಣಾ ನಂಜಪ್ಪ, ಶ್ರೀನಿವಾಸ್, ಮಂಡಲ ಅಧ್ಯಕ್ಷ ಆನಂದ ರಾವ್ ಸಿಂಧೆ, ವೆಂಕಟೇಶ, ನೀಲಗುಂದ ರಾಜು, ಗುರುಪ್ರಾಸದ್, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬಸವರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಲಿತಮ್ಮ, ನೀಲಮ್ಮ, ಮಹಾನಗರ ಪಾಲಿಕೆಯ ಸದಸ್ಯರು, ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಮುಖಂಡರು ಇದ್ದರು