ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಅದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ: ಏ.2: ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಅಧ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ ಅವರು ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಕಂಡುಬಂದರೆ ತಹಶೀಲ್ದಾರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿ ಸಮಸ್ಯೆಗಳನ್ನು ಕೊಡಲೇ ಬಗೆಹರಿಸಬೇಕು. ಸಂಬಂಧಪಟ್ಟ ಗ್ರಾಮಗಳಲ್ಲಿ ಖಾಸಗಿ ಬೊರವೇಲ್‍ಗಳನ್ನು ಬಾಡಿಗೆ ಪಡೆಯಬೇಕು. ಖಾಸಗಿಯಾಗಿ ಲಭ್ಯವಿಲ್ಲವಾದರೇ ಕೂಡಲೇ ಟ್ಯಾಂಕರ್ ಮಾಲಿಕರಿಂದ ಕೋಟೆಶನ್ ಪಡೆದು ಕೋಡಲೇ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಕೇಲವೊಂದು ತಾಲೂಕುಗಳಲ್ಲಿ ನೀರಿನ ಟ್ಯಾಂಕರ್ ಬಾಡಿಗೆ ಪಡೆದು ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು, ಟ್ಯಾಂಕರ್ ಮಾಲೀಕರಿಗೆ 15 ದಿನಕೊಮ್ಮೆ ಬಾಡಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಾಗಿ ಬಾಡಿಗೆ ಪಡೆದ ಖಾಸಗಿ ಬೊರವೇಲ್ ಮಾಲೀಕರಿಗೂ ಸಹ ಬಾಡಿಗೆ ಪಾವತಿಸುವ ಕ್ರಮಕೈಗೊಳ್ಳಬೇಕೆಂದು ಸಂಬಂಧಪಟ್ಟ ತಹಸೀಲ್ದಾರಗಳಿಗೆ ಸೂಚಿಸಿದರು.
ಬಸವಕಲ್ಯಾಣ, ಭಾಲ್ಕಿ, ಕಮಲನಗರ ತಾಲೂಕುಗಳಲ್ಲಿ ಹಲವೆಡೆ ಮೋಟರ್ ಮತ್ತು ಪೈಪ್ ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಆದರ ಬೀಲ್ಲುಗಳ ಪಾವತಿಗೆ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಿಕೊಳ್ಳಲಾಗಿದ್ದು, ಕೇಲವೊಂದು ಗ್ರಾಮಗಳಲ್ಲಿ ಬೋರವೆಲ್ ಕೊರೆಸಿ ಪೈಪ್‍ಲೈನ್ ಅಳವಡಿಸಲು ಅನುಮೊದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶಿಘ್ರದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅದೇ ರೀತಿಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಮೇಶ್ವರ, ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.