ಬಿಸಿಲ ಬೇಗೆ ನಡುವೆ ಚುನಾವಣೆ ಕಾವು
ಕಲಬುರಗಿ,ಏ.1-ಒಂದೆಡೆ ಬಿಸಿಲ ತಾಪ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲಿದೆ.
ಕಾಂಗ್ರೆಸ್ ಭದ್ರಕೋಟೆಯಾದ ಕಲಬುರಗಿ ಲೋಕಸಭಾ ಕ್ಷೇತ್ರ ಕಳೆದ ಬಾರಿ ಬಿಜೆಪಿ ಪಾಲಾಗಿತ್ತು. ಸೋಲಿಲ್ಲದ ಸರ್ದಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಕಹಿಯನ್ನು ಅನುಭವಿಸಿದ್ದರು. ಬಿಜೆಪಿಯ ಡಾ.ಉಮೇಶ್ ಜಾಧವ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಜಾಧವ್ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯಸಭೆಯ ಪ್ರತಿ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿ ಚುನಾವಣೆ ಕಣದಿಂದ ಹಿಂದೆ ಸರಿದು ಅಳಿಯ ರಾಧಾಕೃಷ್ಣ ದೊಡ್ಮನಿ ಅವರನ್ನು ಕಣಕ್ಕಿಳಿಸಿದ್ದಾರೆ. ಇಲ್ಲಿಯವರೆಗೆ ರಾಧಾಕೃಷ್ಣ ದೊಡ್ಮನಿ ಅವರು ಚುನಾವಣಾ ರಾಜಕೀಯದಿಂದ ದೂರವೇ ಉಳಿದಿದ್ದರೂ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬೆನ್ನೆಲುಬಾಗಿ ಕೆಲಸ ಮಾಡಿದ ಅನುಭವ ಉಳ್ಳವರು. ಈ ಬಾರಿ ಸ್ವತ: ಅವರೇ ಲೋಕಸಭಾ ಚುನಾವಣೆಯ ಕಣಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ರಾಧಾಕೃಷ್ಣ ಅವರ ಗೆಲುವನ್ನು ಸವಾಲಾಗಿ ಸ್ವೀಕರಿಸಿರುವ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ರಾಧಾಕೃಷ್ಣ ಅವರ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅತ್ತ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರ ಗೆಲುವಿಗೆ ಪಕ್ಷದ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಟೊಂಕ ಕಟ್ಟಿ ನಿಂತಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೆ ಮುನ್ನವೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದ ಎನ್.ವಿ.ಮೈದಾನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವುದರ ಮೂಲಕ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾದ ಕಲಬುರಗಿಯಿಂದಲೇ ಚುನಾವಣಾ ರಣಕಹಳೆ ಮೊಳಗಿಸಿ ಪಕ್ಷದ ಅಭ್ಯರ್ಥಿ ಡಾ.ಜಾಧವ್ ಅವರ ಪರ ಮತಯಾಚಿಸಿದ್ದರು. ಅದಕ್ಕೆ ಸವಾಲೊಡ್ಡುವಂತೆ ಇದೇ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕಾಂಗ್ರೆಸ್ ಗೆಲುವಿಗೆ ಮನವಿ ಮಾಡಿದ್ದರು.
ಇದೀಗ ಎರಡೂ ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಹೆಸರನ್ನು ಘೋಷಿಸಿ ಚುನಾವಣಾ ಕಣ ಸಜ್ಜುಗೊಳಿಸಿವೆ. ಸದ್ಯ ಚುನಾವಣಾ ಕಣದಲ್ಲಿರುವ ಡಾ.ಉಮೇಶ್ ಜಾಧವ್ ಮತ್ತು ರಾಧಾಕೃಷ್ಣ ದೊಡ್ಮನಿ ಅವರು ಬಿರು ಬಿಸಿಲನ್ನು ಲೆಕ್ಕಿಸದೆ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎರಡೂ ಪಕ್ಷಗಳ ನಾಯಕರು ಸುಡು ಬಿಸಿಲಲ್ಲೂ ಬೆವರು ಸುರಿಸುತ್ತಿದ್ದಾರೆ. 41 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಕೊತಕೊತನೆ ಕುದಿಯುತ್ತಿರುವ ಕಲಬುರಗಿಯಲ್ಲಿ ಚುನಾವಣೆಯ ಕಾವು ಸಹ ದಿನದಿಂದ ದಿನಕ್ಕೆ ಏರುತ್ತಲಿದೆ.
ಜಿಲ್ಲೆಯಲ್ಲಿ ಶುಕ್ರವಾರ 40.9, ಶನಿವಾರ 41.8, ಭಾನುವಾರ 41.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಕಿಯಂತ ಬಿಸಿಲಿಗೆ ಜನ ಬೆವೆತು ಹೋಗುತ್ತಿದ್ದಾರೆ. ರಣ ಬಿಸಿಲನ್ನೂ ಲೆಕ್ಕಿಸದೆ ಅಭ್ಯರ್ಥಿಗಳು ಗೆಲುವಿಗಾಗಿ ಬೆವರು ಸುರಿಸುತ್ತಲಿದ್ದಾರೆ. ಬಿಸಿಲ ಬೇಗೆ ನಡುವೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ.