ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ : ಟಿ.ಭೂಬಾಲನ್
ವಿಜಯಪುರ,ಮಾ.31 :ಲೋಕಸಭೆ ಚುನಾವಣೆ ಪಾರದರ್ಶಕ, ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚೂ ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಲಾರಿ ಟಿ.ಭೂಬಾಲನ್ ಸೂಚಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ್ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಚೆಕ್‍ಪೋಸ್ಟ್‍ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. 24*7 ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿರಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಕ್ರಮ ಹಣ ಸಾಗಾಟ ಮತ್ತು ಉಚಿತ ಉಡುಗೊರೆ (ಫ್ರೀಬೀಸ್) ನಡೆಯುತ್ತಿರುವ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಬೇಕು. ಚೆಕ್‍ಪೆÇೀಸ್ಟ್‍ಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಚುನಾವಣೆ ನೀತಿ ಸಂಹಿತೆಯನ್ನು ಮೀರಿದ ದೂರುಗಳು ಸಿ-ವಿಜಿಲ್ ಆಪ್‍ನಲ್ಲಿ ದಾಖಲಾದರೆ 100 ನಿಮಿಷದ ಒಳಗಡೆ ಅದನ್ನು ಪರಿಹರಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದರು.
ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯೊಂದಿಗೆ ಕ್ರಿಯಾತ್ಮಕ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ 1 ನೇ ಹಂತದ ತರಬೇತಿ ನೀಡುವ, ಅಂಚೆ ಮತಪತ್ರಗಳ ಕಾರ್ಯಗಳ ಬಗ್ಗೆ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ತಂಡಗಳಿಗೆ ವಾಹನ ಹಂಚಿಕೆ ಕುರಿತು, ಚುನಾವಣಾ ಟೆಂಡರ್ ಹಾಗೂ ಚುನಾವಣಾ ವೀಕ್ಷಕರಿಗೆ ಸೌಲಭ್ಯ ಕಲ್ಪಿಸಿದ ಬಗ್ಗೆ, ಚುನಾವಣೆಗೆ ಸಂಬಂಧಿಸಿದ ವಿವಿಧ ದೂರುಗಳ ವಿಲೇವಾರಿ ಕುರಿತು ಚರ್ಚಿಸಲಾಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.