ಶಾಸಕ ಮುನಿರತ್ನ ಗಡಿಪಾರಿಗೆ ಆಗ್ರಹ
ಕಲಬುರಗಿ,ಸೆ.18-ದಲಿತ ಸಮುದಾಯವೊಂದನ್ನು ಕೆಟ್ಟ ಪದಗಳಿಂದ ನಿಂದಿಸಿದರೆನ್ನಲಾದ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಒಂದು ವಾರದಲ್ಲಿ ಜಾತಿ ನಿಂದನೆ ಮೊಕದ್ದಮೆ ದಾಖಲಿಸಿ ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಪತ್ರ ಸಲ್ಲಿಸಿರುವ ಸಮಿತಿ ಜಿಲ್ಲಾ ಸಂಚಾಲಕ ಬಸವರಾಜ ಟಿ.ಬಾಡಿಹಾಳ, ಜಿಲ್ಲಾ ಸಂಘಟನಾ ಆನಂದ ಹತ್ತರಗಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಶಿವಯ್ಯ ಸಿ.ಗುತ್ತೇದಾರ ಅವರು, ಶಾಸಕ ಮುನಿರತ್ನ ಅವರ ವಿರುದ್ಧ ಒಂದು ವಾರದಲ್ಲಿ ಜಾತಿ ನಿಂದನೆ ಮೊಕದ್ದಮೆ ದಾಖಲಿಸಿ ರಾಜ್ಯದಿಂದ ಗಡಿಪಾರು ಮಾಡದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.