ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲಾ ಸಿದ್ದತೆ ಮಾಡಲಾಗಿದೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮಾ.23: 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ 25-03-2024 ರಿಂದ 06-04-2024ರ ವರೆಗೆ ನಡೆಯಲಿದ್ದು ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ತಿಳಿಸಿದರು.
ತಾಲೂಕಿನ 59 ಪ್ರೌಢಶಾಲೆಗಳ 1529 ಹೆಣ್ಣುಮಕ್ಕಳು 1438 ಗಂಡುಮಕ್ಕಳು ಒಟ್ಟಾರೆ 2967 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇದಕ್ಕಾಗಿ ಪಟ್ಟಣದಲ್ಲಿ ಎರಡು ಸಂತೇಬಾಚಹಳ್ಳಿ, ಕಿಕ್ಕೇರಿ, ಅಕ್ಕಿಹೆಬ್ಬಾಳು, ಬೂಕನಕೆರೆ ಸೇರಿದಂತೆ ಆರು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿಟಿವಿಯನ್ನು ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್‍ಕ್ಯಾಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳ ಕಾರ್ಯ ಚಟುವಟಿಕೆಗಳನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಹಂತದಲ್ಲಿಯೂ ಸಹ ವೀಕ್ಷಣೆ ಮಾಡಲು ತಾಲೂಕು ಹಂತದಲ್ಲಿ ತಾಂತ್ರಿಕ ಸಲಹಾ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಸ್ಥಾನಿಕ ಜಾಗೃತ ದಳ ಸಿಬ್ಬಂದಿ ಹಾಗೂ ಅನ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ತಾಲೂಕು ಹಂತದಲ್ಲಿ ತಹಶೀಲ್ದಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳವನ್ನು ರಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಭದ್ರತೆಗಾಗಿ ಆರಕ್ಷಕ ಸಿಬ್ಬಂದಿ ಹಾಗೂ ಮಕ್ಕಳ ಆರೋಗ್ಯ ಕಾಳಜಿಗಾಗಿ ಆರೋಗ್ಯ ಶುಶ್ರೂಷ್ರಕರನ್ನು ನಿಯೋಜಿಸಲಾಗಿದೆ. ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಸುಲಲಿತವಾಗಿ ಪರೀಕ್ಷೆ ಬರೆಯಲು ಸೂಕ್ತೋಪಕರಣಗಳ ವ್ಯವಸ್ಥೆ ಮಾಡಲಾಗಿದೆ ಕುಡಿಯುವ ನೀರು ಶೌಚಾಲಯ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಡಿಜಿಟಲ್ ಸ್ಮಾರ್ಟ್ ಕೈಗಡಿಯಾರಗಳನ್ನು ಧರಿಸುವಂತಿಲ್ಲ. ಪರೀಕ್ಷೆಯನ್ನು ಸುಗಮವಾಗಿ ಹಾಗೂ ಮುಕ್ತ, ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸರ್ವ ರೀತಿಯಲ್ಲೂ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮ ತಿಳಿಸಿದ್ದಾರೆ.
ಇದೇ ಸೋಮವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳು ಧೈರ್ಯ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ನಿಮಗೆಲ್ಲರಿಗೂ ಶುಭವಾಗಲಿ ಎಂದು ಶಾಸಕ
ಹೆಚ್.ಟಿ.ಮಂಜು ಶುಭಹಾರೈಸಿದ್ದಾರೆ.