ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ : ರಾಹುಲ ಶಿಂಧೆ
ಅಥಣಿ/ಚಿಕ್ಕೋಡಿ:ಮಾ. 20 : ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿ.ಪಂ.ಸಿ.ಇ.ಓ.ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಸೂಚನೆ ನೀಡಿದರು.
ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ. ರಾಜಕೀಯ ಪಕ್ಷಗಳು ಅನುಮತಿಗಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು “ಸುವಿಧಾ ಆಪ್” ಪರಿಚಯಿಸಿದ್ದು, ಈ ಆಪ್ ಮೂಲಕ ಅಥವಾ ಖುದ್ದಾಗಿ ಎಆರ್ ಓ ಕಚೇರಿಗೆ ಭೇಟಿ ನೀಡಿ ಅನುಮತಿ ಪಡೆಯಬಹುದಾಗಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕು. ತಾರಾ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು.
ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಇನ್ನೂ ಅವಕಾಶ ಇದ್ದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಬಾಕಿ ಇದ್ದಂತಹ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೆ ಮುಂದಾಗುವಂತೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.