ಕೆಲ್ಲಂಬಳ್ಳಿಯಲ್ಲಿ ಸ್ವಚ್ಚತಾ ಸೇವಾ ಹೀ ಆಂದೋಲನಕ್ಕೆ ಶಾಸಕ ಚಾಲನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.18- ಸಾರ್ವಜನಿಕರಿಗೆ ಶುಚಿತ್ವ, ನೈರ್ಮಲ್ಯದ ಕುರಿತು ವ್ಯಾಪಕ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸ್ವಚ್ಚತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಕೆಲ್ಲಂಬಳ್ಳಿಯಲ್ಲಿಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ್ಲಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ತಾಲೂಕು ಪಂಚಾಯತ್ ಹಾಗೂ ಭೋಗಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸ್ವಭಾವ ಸ್ವಚ್ಚತಾ-ಸಂಸ್ಕಾರ ಸ್ವಚ್ಚತಾ ಧ್ಯೇಯೋದ್ದೇಶದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಹೀ ಸೇವಾ ಆಂದೋಲನ ಪಾಕ್ಷಿಕ ಆಚರಣೆ ಕಾರ್ಯಕ್ರಮವನ್ನು ಶಾಸಕ ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದಿನಿಂದ ಅಕ್ಟೋಬರ್ 2ರವರೆಗೆ ಸ್ವಚ್ಚ್ಚತೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ಸಾರ್ವಜನಿಕರು, ಮಹಿಳೆಯರು, ಮಕ್ಕಳಿಗೆ ಗ್ರಾಮಗಳ ಶುಚಿತ್ವ, ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದೇ ಸ್ವಚ್ಚತಾ ಸೇವೆ ಪಾಕ್ಷಿಕ ಆಚರಣೆಯ ಉದ್ದೇಶವಾಗಿದೆ. 1917ರಲ್ಲಿಯೇ ಸ್ವಚ್ಚತಾ ಆಂದೋಲನ ಪ್ರಾರಂಭವಾಗಿದೆ ಎಂದರು.
ಮಹಾತ್ಮ ಗಾಂಧೀಜೀಯವರು ಗ್ರಾಮಗಳ ಸ್ವಚ್ಚತೆಯಿಂದ ದೇಶದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡಿದ್ದರು. ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದನ್ವಯ ಪ್ರತಿವರ್ಷದಂತೆ ಈ ಬಾರಿಯೂ ಸ್ವಚ್ಚತಾ ಸಂಬಂಧ ವಿಶಿಷ್ಟ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತೆಯೇ ಸೇವೆ ಶೀರ್ಷಿಕೆಯಡಿ ಆಯೋಜಿಸಲಾಗುತ್ತಿದೆ. ಗ್ರಾಮಗಳ ಸ್ವಚ್ಚತಾ ಕಾರ್ಯದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅವಶ್ಯವಾಗಿದೆ ಎಂದು ಶಾಸಕರು ತಿಳಿಸಿದರು.
ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಆರೋಗ್ಯದ ಹಿತದೃಷ್ಠಿಯಿಂದ ಗ್ರಾಮೀಣ ಜನರು ಬಯಲು ಬಹಿರ್ದೆಸೆ ತ್ಯಜಿಸಿ ಶೌಚಾಲಯಗಳನ್ನು ಬಳಸಬೇಕು. ಸಾಮೂಹಿಕ ಶೌಚಾಲಯಗಳ ನಿರ್ವಹಣೆ ಸಮರ್ಪಕವಾಗಿರಬೇಕು. ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರವು ಲಕ್ಷಾಂತರ ರೂ. ವೆಚ್ಚ ಮಾಡುತ್ತಿದೆ. ಸ್ವಚ್ಚತೆಗಾಗಿ ಬಿಡುಗಡೆಯಾಗುವ ಅನುದಾನ ಸದ್ಭಳಕೆಯಾಗಬೇಕು. ಈ ಬಗ್ಗೆ ಮಹಿಳೆಯರು, ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಸ್ವಚ್ಚತಾ ಕಾರ್ಯಕ್ರಮಗಳ ನೇತೃತ್ವ ವಹಿಸಿ ಆಯಾ ಗ್ರಾಮಗಳ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಶಾಸಕಸಿ. ಪುಟ್ಟರಂಗಶೆಟ್ಟಿ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಅವರು ಮಾತನಾಡಿ ಗಾಂಧಿ ಜಯಂತಿ ಅಂಗವಾಗಿ ಪ್ರತಿವರ್ಷ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಸ್ವಚ್ಚತಾ ಹೀ ಸೇವಾ ಆಂದೋಲನ ಪಾಕ್ಷಿಕ ಆಚರಣೆಯ ಮೂಲಕ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿಯೂ ಸ್ವಚ್ಚತೆಗೆ ಸಂಬಂಧಿಸಿದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಸ್ವಚ್ಚತೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಸೋಮಶೇಖರ್ ಅವರು ಕಾರ್ಯಕ್ರಮದಲ್ಲಿ ಸ್ವಚ್ಚತೆ ಬಗ್ಗೆ ಮಾತನಾಡಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಸ್ಚಚ್ಚತೆಯ ಕುರಿತ ಪ್ರತಿಜ್ಞಾವಿಧಿ ಬೋಧಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೂಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಶಾಲಾಮಕ್ಕಳು ಅನುಪಯುಕ್ತ ವಸ್ತುಗಳಿಂದ ತಯಾರಿಸಿದ ವಿವಿಧ ಅಲಂಕಾರಿಕ ಕಲಾಕೃತಿಗಳನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳನ್ನೊಳಗೊಂಡು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಚತೆ ಕುರಿತ ಜಾಗೃತಿ ಜಾಥಾಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಹಸಿರು ನಿಶಾನೆ ತೋರಿದರು. ತದನಂತರ ಗ್ರಾಮದ ಸ್ವಚ್ಚತಾ ಶ್ರಮದಾನದಲ್ಲಿ ಪಾಲ್ಗೊಂಡರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾನಸ, ಕುದೇರು ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಕುಮುದಾ, ಭೋಗಾಪುರ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಕೆಲ್ಲಂಬಳ್ಳಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಕೆಲ್ಲಂಬಳ್ಳಿ ಗ್ರಾಮಸ್ಥರು, ಮುಖಂಡರು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಭೋಗಾಪುರ ಬಳಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ 10 ಲಕ್ಷ ರೂ.ಗಳ ವೆಚ್ಚದಲ್ಲಿ ‘ಸ್ವಚ್ಚ ಸಂಕೀರ್ಣ ಉದ್ದೇಶಕ್ಕಾಗಿ ನಿರ್ಮಿಸಿರುವ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.