1,685 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಘೋಷಣೆ
ಕಲಬುರಗಿ,ಸೆ 17: ರಾಜ್ಯ ಸರ್ಕಾರದಿಂದಲೆ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೆ ಇಲ್ಲಿನ ನಗರ ವಾಸಿಗಳ ಜೀವನ ಗುಣಮಟ್ಟ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಇದು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದ ಪೆÇಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ ಕಾಯ್ದೆ ರೂಪದಲ್ಲಿ ಜಾರಿಗೊಳಿಸಿ ಇದೀಗ 10 ವರ್ಷ ತುಂಬಿದೆ.
ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿ, ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿಯ ಫಲವಾಗಿ ಕಲ್ಯಾಣ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಸಾಮಾಜಿಕ ಕ್ರಾಂತಿಗೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮಾದರಿ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ ಎಂದರು
ಈ ಭಾಗದ ಜನರ ಆಶೋತ್ತರದಂತೆ ಅಭಿವೃದ್ಧಿಯ ವೇಗ ಹೆಚ್ಚಿಸಲು ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂವಿಧಾನ ಕಲಂ 371ಕ್ಕೆ ತಿದ್ದುಪಡಿ ತರಬೇಕು ಎನ್ನುವ ಹೋರಾಟವು ದಶಕಗಳ ಕಾಲ ನಡೆಯಿತು.
ಹಲವು ದಶಕಗಳ ತೀವ್ರ ಹೋರಾಟ ಹಾಗೂ ಈ ಭಾಗದ ಹಿರಿಯ ರಾಜಕಾರಣಿಗಳಾದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿವಂಗತ ಎನ್.ಧರಂಸಿಂಗ್ ಅವರ ಅವಿರತ ಪ್ರಯತ್ನ ಹಾಗೂ ಅವರ ಜೊತೆಗೂಡಿದ ಅನೇಕ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು.
ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪ್ರಯತ್ನದಿಂದ ಮುಂದೆ ಅಧಿಕಾರಕ್ಕೆ ಬಂದ ಮನಮೋಹನ್ ಸಿಂಗ್ ನೇತೃತ್ವದ ಅಂದಿನ ಯು.ಪಿ.ಎ. ಸರ್ಕಾರ ಡಿಸೆಂಬರ್ 2012 ರಲ್ಲಿ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದು 371 (ಜೆ) ಪರಿಚ್ಛೇದ ಸೇರ್ಪಡೆ ಮಾಡಲಾಯಿತು. ರಾಷ್ಟ್ರಪತಿಗಳ ಅಂಕಿತದೊಂದಿಗೆ ಇದು2013 ಜನವರಿ 1ರಿಂದ ಜಾರಿಗೆ ಬಂದಿತು.
ಸಂವಿಧಾನದಲ್ಲಿ ಆರ್ಟಿಕಲ್ 371 (ಜೆ) ಪರಿಚ್ಛೇದÀ ಸೇರ್ಪಡೆಯೊಂದಿಗೆ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಪುನರ್ ನಾಮಕರಣ ಮಾಡಲಾಯಿತು. ಅಲ್ಲಿಂದ ಈಚೆಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಯಿತು ಎಂದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ. ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ಮೂಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ. ಘೋಷಿಸಿ ಅನುದಾನ ಹಂಚಿಕೆ ಮಾಡಲಾಗಿದೆ.
ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು 2002ರಲ್ಲಿ ಸಲ್ಲಿಸಲಾಗಿದ್ದು, ಆ ನಂತರದಲ್ಲಿ ತಾಲ್ಲೂಕುಗಳ ಸಾಮಾಜಿಕ ಆರ್ಥಿಕ ಹಾಗೂ ಇನ್ನಿತರೆ ಆಯಾಮಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಆಗಿರುವ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಪೆÇ್ರ. ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಮೂಲಕ ಪ್ರಸ್ತುತ ರಾಜ್ಯದಲ್ಲಿನ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆಯ ಆಧಾರದ ಮೇಲೆ ಜಿಲ್ಲೆ ಮತ್ತು ತಾಲ್ಲೂಕುಗಳನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕಗಳನ್ನು ತಯಾರಿಸಲಾಗುವುದು.
ಸಂವಿಧಾನದ 371(ಜೆ) ಕಲಂ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಲಾದ ವಿಶೇಷ ಸ್ಥಾನಮಾನದ ಅನುಷ್ಠಾನಕ್ಕಾಗಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಮೇಲ್ವಿಚಾರಣೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಉಪ ಸಮಿತಿಯನ್ನು ರಚಿಸಲಾಗಿದ್ದು, ಈ ಭಾಗದ ಯುವಕರ ಆಶೋತ್ತರಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ.
ತಳ ಸಮುದಾಯಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಶ್ರೇಯೋಭಿವೃದ್ಧಿಗೆ ಒಟ್ಟು 39,121 ಕೋಟಿ ರೂ. ಹಣ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಮಂಡಳಿಯು ಈ ವರ್ಷ ಸಹ 1250 ಕೋಟಿ ರೂ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು “ಅಕ್ಷರ ಆವಿಷ್ಕಾರ” ಕಾರ್ಯಕ್ರಮವು ಇನ್ನಷ್ಟು ಶಕ್ತಿ ತಂದಿದೆ. ಕೆ.ಕೆ.ಆರ್.ಡಿ.ಬಿ.ಯು 2023-24 ಮತ್ತು 2024-25 ಎರಡೂ ವರ್ಷಗಳನ್ನು ಶೈಕ್ಷಣಿಕ ವರ್ಷಗಳೆಂದು ಘೋಷಣೆ ಮಾಡಿದೆ. ಈ ವರ್ಷ 1008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್, ಯುಕೆಜಿ ಎಂಬ ಹೊಸ ಮಾದರಿಯನ್ನು ಪ್ರಾರಂಭಿಸಲಾಗಿದೆ. ನಮ್ಮ ನಿರೀಕ್ಷೆ ಮೀರಿ 36,445 ಮಕ್ಕಳು ಪ್ರವೇಶ ಪಡೆದು ದಾಖಲೆ ಬರೆದಿದ್ದಾರೆ. ಇದಕ್ಕಾಗಿ ಹೊಸದಾಗಿ 1353 ಅತಿಥಿ ಶಿಕ್ಷಕರನ್ನು ಹಾಗೂ 892 ಸಹಾಯಕಿಯರನ್ನು ನೇಮಕ ಮಾಡಿಕೊಂಡಿದ್ದೇವೆ.
ಈ ಭಾಗದ 872 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಯನ್ನೂ ಪ್ರಾರಂಭಿಸಿದ್ದೇವೆ. 306 ಪ್ರೌಢಶಾಲೆಗಳಲ್ಲಿ ಈ ವರ್ಷ 9 ನೇ ತರಗತಿಯ ಮಕ್ಕಳ ಕೌಶಲ್ಯ ವೃದ್ಧಿಗಾಗಿ ಕಂಪ್ಯೂಟರ್ ಕಲಿಕೆಯನ್ನು ಪ್ರಾರಂಭಿಸಿದ್ದೇವೆ. ಶಿಕ್ಷಣದ ಗುಣಮಟ್ಟ ಸುಧಾರಿಸಿ ಇಲ್ಲಿನ ಮಕ್ಕಳೂ ಕೂಡ ತಾವು ಇತರರಂತೆಯೇ ತಲೆ ಎತ್ತಿ ನಿಲ್ಲಲು ಅನುಕೂಲವಾಗುವಂತೆ ಮಾಡಲು ಈ ವರ್ಷ “ಕಲಿಕಾಸರೆ” ಎಂಬ ಹೆಸರಿನಲ್ಲಿ ವಿಶೇಷ ಅಭ್ಯಾಸ ಪುಸ್ತಕವನ್ನು ಒದಗಿಸಲಾಗುತ್ತಿದೆ. ಕೆ.ಕೆ.ಆರ್.ಡಿ.ಬಿ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ 180 ಕೋಟಿ ರೂಗಳನ್ನು ಒದಗಿಸಿ ಮೆಟ್ರಿಕ್ ಪೂರ್ವ- ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 44 ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅಂದಾಜು ಮೊತ್ತ 8,290 ಕೋಟಿ ರೂಪಾಯಿಗಳಿಗೆ 2,283 ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿದೆ.
ಉತ್ತಮ ಶಿಕ್ಷಣ ನೀಡುವ ಜೊತೆಗೆ ಉದ್ಯೋಗಾವಾಕಾಶಗಳನ್ನು ಸೃಜಿಸುವ ಉದ್ದೇಶದಿಂದ ಉದ್ಯೋಗ ಆವಿಷ್ಕಾರ ಯೋಜನೆಯನ್ನು ರೂಪಿಸಿದ್ದೇವೆ. ಇದರ ಅಡಿಯಲ್ಲಿ ಸುಮಾರು 10 ಕೋಟಿ ರೂ ವೆಚ್ಚದಲ್ಲಿ ಸುಮಾರು 25,000 ಮಕ್ಕಳಿಗೆ ಕಲಿಕೆ ಜೊತೆ ಕೌಶಲ್ಯ, ಸಿಡಾಕ್ ಹಾಗೂ “ಇಂಡಸ್ಟ್ರಿ ಲಿಂಕೇಜ್ ಸೆಲ್” ಮುಖಾಂತರ ತರಬೇತಿ ನೀಡಲಾಗುತ್ತಿದೆ.
ಕಲಬುರಗಿಯಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಅತ್ಯಾಧುನಿಕ ಇನ್ಕ್ಯುಬೇಶನ್ ಮತ್ತು ಕೌಶಲ್ಯ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಈ ಪರಿವರ್ತಕ ಯೋಜನೆಯು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲಿದ್ದು ಕಲಬುರಗಿಯನ್ನು ನೈಪುಣ್ಯತೆ ಮತ್ತು ಅವಕಾಶಗಳ ಕೇಂದ್ರವಾಗಿ ಪರಿವರ್ತಿಸುತ್ತದೆ.
ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೊಸ ಫ್ಲಾಟ್-ಫೆÇ್ಲೀರ್ ಫ್ಯಾಕ್ಟರಿ ರಾಜ್ಯದ ಎಲೆಕ್ಟ್ರಾನಿಕ್ಸ್ ಉದ್ಯಮಕ್ಕೆ ಒಂದು ಮಹತ್ತರ ಹೆಜ್ಜೆಯಾಗಿದೆ. ಇದು ಬಳಸಲು ಸಿದ್ಧವಾದ ಕಾರ್ಖಾನೆ ಸ್ಥಳಗಳನ್ನು ಸಂಪೂರ್ಣ ಸೌಲಭ್ಯಗಳೊಂದಿಗೆ ಉದ್ದಿಮೆದಾರರಿಗೆ ಒದಗಿಸುತ್ತದೆ. ಇಂದು ಸಂಜೆ ಕಲಬುರಗಿಯಲ್ಲಿ ಅತ್ಯಂತ ಮಹಾತ್ವಾಕಾಂಕ್ಷೆಯ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ. ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ, ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ ಪಾಟೀಲ, ಎಚ್.ಸಿ ಮಹಾದೇವಪ್ಪ, ಡಿ ಸುಧಾಕರ, ಕೆ.ಜೆ ಜಾರ್ಜ,ಕೆ.ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಅವರು ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ
ಶಾಸಕ ಡಾ. ಅಜಯಸಿಂಗ್ ,ಮುಖ್ಯಮಂತ್ರಿ ಸಲಹೆಗಾರ ಬಿ.ಆರ್ ಪಾಟೀಲ,ಶಾಸಕರಾದ ಅಲ್ಲಮಪ್ರಭು ಪಾಟೀಲ,ಎಂ.ವೈ ಪಾಟೀಲ,ಶಶೀಲ ನಮೋಶಿ, ಬಿ.ಜಿ ಪಾಟೀಲ,ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಜಿಲ್ಲೆಯ ಶಾಸಕರು ಉನ್ನತ ಅಧಿಕಾರಿಗಳಾದ ಕೃಷ್ಣಾ ಭಾಜಪೇಯಿ, ಫೌಜಿಯಾ ತರನ್ನುಮ್, ಅಡ್ಡೂರು ಶ್ರೀನಿವಾಸಲು, ಡಾ.ಶರಣಪ್ಪ ಎಸ್.ಡಿ, ಭಂವರಸಿಂಗ್ ಮೀನಾ,ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.