ಜನರನ್ನು ಕಚೇರಿಗೆ ಅಲೆಸದೇ ಉತ್ತಮವಾಗಿ ಸ್ಪಂದಿಸಬೇಕು : ಎಸ್.ಮಧು ಬಂಗಾರಪ್ಪ

ಸಂಜೆವಾಣಿ ವಾರ್ತೆ
ಶಿವಮೊಗ್ಗ, ಮಾ.೧೪: ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಪದೇ ಪದೇ ಸರ್ಕಾರಿ ಕಚೇರಿ ಅಲೆಯುವುದನ್ನು ಅಧಿಕಾರಿಗಳು ತಪ್ಪಿಸಬೇಕು. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರ ಒದಗಿಸಬೇಕು ಎಂದರು.