ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮೊದಲ ಆದ್ಯತೆಯಾಗಲಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ ಮಾ. ೧೪; ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ, ತಕ್ಷಣವೇ ಸ್ಪಂದಿಸಿ, ಗ್ರಾಮಗಳ ಜನರಿಗೆ ಕುಡಿಯುವ ನೀರನ್ನು ಒದಗಿಸುವುದು ಆಯಾ ಗ್ರಾಮ ಪಂಚಾಯತಿ ಪಿ.ಡಿ.ಒ ಗಳ ಮೊದಲ ಆದ್ಯತೆ ಆಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಸೂಚನೆ ನೀಡಿದರು.ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಳೆಯ ಕೊರತೆ ಹಾಗೂ ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ 27 ಗ್ರಾಮ ಪಂಚಾಯತಿಗಳ 56 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.  ಈ ಪೈಕಿ ಈಗಾಗಲೆ 27 ಗ್ರಾಮಗಳಲ್ಲಿ ಸಮಸ್ಯೆ ತೀವ್ರವಾಗಿದ್ದು, 33 ಗ್ರಾಮಗಳಲ್ಲಿ ಕುಡಿಯುವ ನೀರನ್ನು ಜನರಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ.  24 ಗ್ರಾಮಗಳಲ್ಲಿ ಖಾಸಗಿ ಬೋರ್‍ವೆಲ್‍ಗಳನ್ನು ಗುರುತಿಸಿ, ಅವರುಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು, ನೀರು ಪೂರೈಸಲು ಕೂಡ ಕ್ರಮ ಕೈಗೊಳ್ಳಲಾಗಿದೆ.  ಹೀಗಾಗಿ ಗ್ರಾಮ ಪಂಚಾಯತಿಗಳ ಪಿಡಿಒ ಗಳು ಕುಡಿಯುವ ನೀರಿನ ಪೂರೈಕೆ ಬಗ್ಗೆ ತೀವ್ರ ನಿಗಾ ವಹಿಸುವುದು ಅಗತ್ಯವಾಗಿದೆ.  ಪೂರೈಸಲಾಗುವ ನೀರಿನ ಗುಣಮಟ್ಟದ ಬಗ್ಗೆಯೂ ಖಾತ್ರಿ ಪಡಿಸಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.  ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿರುವ ಬೋರ್‍ವೆಲ್‍ಗಳು ವಿಫಲವಾಗಿದ್ದಲ್ಲಿ, ಅಂತಹ ಕೊಳವೆಬಾವಿಗಳ ಪುನಶ್ಚೇತನಕ್ಕೆ ಮುಂದಾಗಬೇಕು,  ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆಯಲು ಕ್ರಮ ವಹಿಸಬೇಕು.  ಬಳಿಕವೂ ಸಾಧ್ಯವಾಗದಿದ್ದಲ್ಲಿ ತಕ್ಷಣಕ್ಕೆ ಟ್ಯಾಂಕರ್ ಮೂಲಕ ಸರಬರಾಜು ಮಾಡಬೇಕು.  ಹೊಸ ಬೋರ್‍ವೆಲ್ ಕೊರೆಯಿಸುವುದು ಅತ್ಯಂತ ಕೊನೆಯ ಆಯ್ಕೆಯಾಗಿದ್ದು, ಇದಕ್ಕಾಗಿ ನೀರಿನ ಲಭ್ಯತೆ ಬಗ್ಗೆ ಭೂವಿಜ್ಞಾನಿಗಳ ಅಭಿಪ್ರಾಯ ಅತ್ಯಂತ ಅಗತ್ಯವಾಗಿದೆ ಎಂದು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸುವುದು ಗ್ರಾಮ ಪಂಚಾಯತಿಗಳ ಮೊದಲ ಆದ್ಯತೆ ಆಗಿದೆ.  ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ದೂರುಗಳು ಬಂದಲ್ಲಿ, ತಕ್ಷಣ ಸ್ಪಂದಿಸಿ, ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು.  ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಬಗ್ಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಲ್ಲಿ 24*7 ಸಹಾಯವಾಣಿ ಯನ್ನು ಪ್ರಾರಂಭಿಸಲಾಗಿದೆ.   ಸಹಾಯವಾಣಿಗಳಿಗೆ ಬರುವ ಸಾರ್ವಜನಿಕರ ಕರೆಗಳಿಗೆ ಸ್ವಂದಿಸಿ, ಅವರ ಕುಂದು – ಕೊರತೆಗಳನ್ನು ಅದರಲ್ಲೂ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು.  ಯಾವುದೇ ಬಗೆಯ ಉದಾಸೀನತೆ ತೋರಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿ.ಪಂ. ಸಿಇಒ ಎಚ್ಚರಿಕೆ ನೀಡಿದರು.