ಮಂಗಲಾಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರಧಾನ: ಹರ್ಷ
ಬೀದರ್:ಮಾ.13: ತಾಲೂಕಿನ ಅಲಿಯಂಬರ ಗ್ರಾಮದ ಮಂಗಲಾ ಮಹಿಳಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕು.ಮಂಗಲಾ ಮರಕಲೆ ಅವರಿಗೆ ಇತ್ತಿಚೀಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯ ರಾಜ್ಯಧಾನಿ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಜವಾಹರ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕು.ಮಂಗಲಾ ಮರಕಲೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ತಾನೋರ್ವ ವಿಶೇಷ ಚೇತನ ಎಂಬುದನ್ನು ಮರೆತು ಸ್ವಂತ ಆತ್ಮಸ್ಥೈರ್ಯದಿಂದ ಯಾರ ಬೆಂಬಲ ಇಲ್ಲದೆ ಸ್ವಂತಿಕೆಯಿಂದ ಮುಂದೆ ಬಂದು ಈ ಪ್ರಶಸ್ತಿಗೆ ಭಾಜನರಾಗಿ ನಮ್ಮೂರಿನ ಹಾಗೂ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವುದು ತುಂಬ ಹರ್ಷ ತಂದಿದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ನಿಗ್ರಹ ಸಮಿತಿ ಜಿಲ್ಲಾಧ್ಯಕ್ಷ ಸಂಗಮೇಶ ಬಾವಿದೊಡ್ಡಿ ತಿಳಿಸಿದ್ದಾರೆ.