ಕೃಷಿ  ಕ್ಷೇತ್ರಗಳಿಗೆ ಮನ್ನಣೆ ನೀಡಿದಲ್ಲಿ ಪ್ರದೇಶಾಭಿವೃದ್ಧಿ
ಸಂಜೆವಾಣಿ ವಾರ್ತೆ
ಬಳ್ಳಾರಿ, ಸೆ.17: ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಕೃಷಿ  ಕ್ಷೇತ್ರಗಳಿಗೆ ಹೆಚ್ಚಿನ ಮನ್ನಣೆ ಸಿಕ್ಕಾಗ ಮಾತ್ರ ಹಿಂದುಳಿದ ಪ್ರದೇಶಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನ ಅಂದರೆ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನಿಜಾಮರ ಕಾಲದಿಂದಲೂ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿವೆ.
ಕೈಗಾರಿಕೆಗಳು ಹಾಗೂ ನೀರಾವರಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಕ್ಕರೆ ಉದ್ಯೋಗ ಸೃಷ್ಟಿಯಾಗುತ್ತದೆ. ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ. ವಿದ್ಯಾವಂತರು ಉದ್ಯೋಗ ಪಡೆದು ನಿಶ್ಚಿಂತೆಯಿಂದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ.
ಅಷ್ಟೇ ಅಲ್ಲದೆ ತಾಂತ್ರಿಕ ವಿಶ್ವ ವಿದ್ಯಾಲಯಗಳ ಸ್ಥಾಪನೆಯಾಗಬೇಕು.ಇದರಲ್ಲಿ ಕೌಶಲ್ಯ ಪಡೆದ ವಿದ್ಯಾವಂತರು ದೇಶದ ಬೇರೆ ಬೇರೆ ಕಡೆ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ.
ಆದ್ದರಿಂದ ವಿದ್ಯಾರ್ಥಿಗಳು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶ ಮೈಗೂಡಿಸಿಕೊಂಡು ಅಖಂಡ ಭಾರತ ದೇಶದ ಏಕತೆಯನ್ನು ಸದಾ ಕಾಪಾಡಬೇಕೆಂದು ಹೇಳಿದರು.
ಶಿಕ್ಷಕರಾದ ಸುಮತಿ ವಲ್ಲಭಭಾಯಿ ಪಟೇಲ್ ಹಾಗೂ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರೆ ಚನಮ್ಮ ಪೂಜೆ ನೆರವೇರಿಸಿದರು.
ಶಿಕ್ಷಕರಾದ ದಿಲ್ಷಾದ್ ಬೇಗಂ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ, ಗುರುಪ್ರಸಾದ್, ವಿಜಯ ಮುಂಡ್ರಿಗಿ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಕೆ.ಎಸ್. ಅನುಷ ಮುಂತಾದವರು ಉಪಸ್ಥಿತರಿದ್ದರು.