ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೧೨; ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ ಮೇಲಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ ಹೇಳಿದರು.ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಸೋಮವಾರ ಆಯೋಜಿಸಲಾದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜವನಗೊಂಡನಹಳ್ಳಿ ಹೋಬಳಿಯಲ್ಲಿ ಅಂತರ್ಜಲ ಮಟ್ಟ ತುಂಬಾ ಕುಸಿದಿದೆ. ಸಾವಿರ ಅಡಿ ಬೋರ್‍ವೆಲ್ ಕೊರೆದರೂ ನೀರು ಸಿಗದ ಪರಿಸ್ಥಿತಿಯಾಗಿದೆ. ಜವನಗೊಂಡನಹಳ್ಳಿಯಲ್ಲಿ ಈಗಾಗಲೇ 9 ಬೋರ್‍ವೆಲ್ ಕೊರೆಯಲಾಗಿದ್ದು, ಅದರಲ್ಲಿ 5 ಬೋರ್‍ವೆಲ್‍ನಲ್ಲಿ ನೀರು ಸಿಕ್ಕಿದೆ. ಮುಂದಿನ ದಿನಗಳಲ್ಲಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಟ್ಯಾಂಕರ್ ನೀಡುವ ಆಲೋಚನೆಯಿದೆ. ಅಲ್ಲಿಯವರೆಗೆ ಖಾಸಗಿ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗದ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಹಿರಿಯೂರು ತಾಲ್ಲೂಕಿನಾದ್ಯಂತ ರೂ.100 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಭದ್ರಾ ಮೇಲ್ದಂಡೆ  ಯೋಜನೆಯ ಪೈಪ್ ಲೈನ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಹ ಜನತಾ ದರ್ಶನ ಮಾಡುತ್ತಿದ್ದಾರೆ.  ಸಚಿವರ ನೇತೃತ್ವದಲ್ಲಿ ಜರುಗುವ ಜನತಾ ದರ್ಶನದಲ್ಲಿ ಸ್ವೀಕರಿಸುವ ಅರ್ಜಿಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷೆ ತೋರದೆ, ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಅರಸಿ ಅರ್ಜಿ ಹಿಡಿದು ಅಲೆದಾಡುವುದನ್ನು ತಪ್ಪಿಸಲು, ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ಆಯೋಜಿಸಲಾಗಿದೆ. ತೀವ್ರ ತರನಾದ ಬರದ ಹಿನ್ನೆಯಲ್ಲಿ ಜಿಲ್ಲೆಯಾದ್ಯಂತ ಯುದ್ಧಸನ್ನದ್ದ ರೀತಿಯ ಕುಡಿಯುವ ನೀರಿನ ಸೌಲಭ್ಯ ಹಾಗೂ ಪರಿಹಾರದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.