ಕುಡಿಯುವ ನೀರಿನ ಬವಣೆ ತಪ್ಪಿಸಲು ಅಗತ್ಯ ಕ್ರಮ: ಡಿಕೆಶಿ
ಬೆಂಗಳೂರು, ಮಾ. ೧೧:ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ’ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ. ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದರು.
ಕಳೆದ ೩೦-೪೦ ವರ್ಷಗಳಲ್ಲಿ ಇಂತಹ ಭೀಕರ ಬರಗಾಲವನ್ನು ನಾವು ನೋಡಿರಲಿಲ್ಲ. ಬೆಂಗಳೂರಿನಲ್ಲಿರುವ ೧೩,೯೦೦ ಕೊಳವೆ ಬಾವಿಗಳಲ್ಲಿ ೬,೯೦೦ ಕೊಳವೆ ಬಾವಿ ಬತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಖಾಸಗಿ ನೀರಿನ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದು ನೀರು ಪೂರೈಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ನೀರಿನ ಪೂರೈಕೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ನಾವು ತಡೆದಿದ್ದೇವೆ. ಜನರಿಗೆ ಸೂಕ್ತ ದರದಲ್ಲಿ ನೀರು ಸಿಗುವಂತೆ ಮಾಡಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ ಮೆಂಟ್ ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ ಎಂದರು.
ಈಗಾಗಲೇ ೧೫೦೦ಕ್ಕೂ ಹೆಚ್ಚು ಟ್ಯಾಂಕರ್ ಗಳನ್ನು ನೋಂದಣಿ ಮಾಡಲಾಗಿದ್ದು, ಬೇರೆಯವರಿಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಿದ್ದೇವೆ. ಪೊಲೀಸ್, ಆರ್ ಟಿಓ, ಪಾಲಿಕೆ ಅವರಿಗೆ ಸೂಚನೆ ನೀಡಿ ನೋಂದಾಯಿತ ಟ್ಯಾಂಕರ್ ಗಳ ಮೇಲೆ ಸರ್ಕಾರದ ನಾಮಫಲಕ ಅಳವಡಿಸುವಂತೆ ಮಾಡುತ್ತೇವೆ. ಆಮೂಲಕ ಸರ್ಕಾರದ ನಿಯಂತ್ರಿತ ಕಾನೂನುಬಾಹಿರವಾಗಿ ಜನರಿಂದ ವಸೂಲಿ ಮಾಡುವುದನ್ನು ತಡೆಗಟ್ಟಲು ಮುಂದಾಗಿದ್ದೇವೆ. ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ ೧೧೦ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ೫ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ. ಎಂದು ಭರವಸೆ ನೀಡಿದರು.
ತಮಿಳುನಾಡಿಗೆ ನೀರು ಬಿಟ್ಟಿಲ್ಲ
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ ೨ ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್‌ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ. ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೊಜನೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮರು ಕೊರೆಯುವುದು, ಹೊಸ ಕೊಳವೆ ಬಾವಿ ಕೊರೆಯಲು ತೀರ್ಮಾನಿಸಿದ್ದೇವೆ. ಕೈಗಾರಿಕೆ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲರಿಗೂ ನೀರು ಪೂರೈಸುತ್ತೇವೆ. ಇದ್ಕಾಗಿ ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ಭಾಗದ ಹಳ್ಳಿಗಳ ರೈತರ ಜತೆಗೂ ಒಪ್ಪಂದ ಮಾಡಿಕೊಂಡು ಅವರ ಕೊಳವೆ ಬಾವಿ ಬಳಸಿಕೊಳ್ಳಲಾಗುವುದು. ಕೆಲವು ಬುದ್ಧಿವಂತರು ಸ್ನಾನಕ್ಕೂ ನೀರಿಲ್ಲ ಎಂದು ಟ್ವೀಟ್ ಮಾಡುತ್ತಾರೆ. ಈ ಮಧ್ಯೆ ವಾರ್ಡ್, ವಲಯ ಮಟ್ಟದಲ್ಲಿ ಕಾಲ್ ಸೆಂಟರ್ ಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನ ಇತಿಹಾಸದಲ್ಲೇ ಇಷ್ಟು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ಯಾವ ಸರ್ಕಾರವೂ ಮಾಡಿರಲಿಲ್ಲ.
ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ. “ಬಿಜೆಪಿಯವರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಹೇಗೆ ಸಾಧ್ಯ? ಅವರು ಈ ರೀತಿ ಹೇಳಿಕೆ ಕೊಟ್ಟಿರುವುದು ಇದೇ ಮೊದಲಲ್ಲ. ಹಾಗಿದ್ದರೆ ಅವರನ್ನು ಬಿಜೆಪಿಯಲ್ಲಿ ಉಳಿಸಿಕೊಂಡಿರುವುದೇಕೆ? ಅವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ? ಅವರು ಕೇಂದ್ರದ ಮಾಜಿ ಸಚಿವರು, ಹಾಲಿ ಸಂಸದರು. ಅವರ ವಿರುದ್ಧ ಬಿಜೆಪಿ ಏನಾದರೂ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.