ಲಕ್ಷ್ಮೇಶ್ವರ: ಧರ್ಮ ಜಾಗೃತಿ ಸಮಾರಂಭ
ಲಕ್ಷ್ಮೇಶ್ವರ,ಮಾ11: ಭೌತಿಕ ಬದುಕಿಗೆ ಸಂಪತ್ತಿನೊಂದಿಗೆ ಶಿವಜ್ಞಾನದ ಅರಿವು ಮುಖ್ಯ. ಸಂಸ್ಕಾರ ಮತ್ತು ಸಂಸ್ಕøತಿ ಎಂಬ ಬೀಜ ಬಿತ್ತಿ ಜೀವನದಲ್ಲಿ ಸತ್ಫಲಗಳನ್ನು ಪಡೆಯಬೇಕು. ಜ್ಞಾನ ಕ್ರಿಯಾತ್ಮಕವಾದ ಧರ್ಮ ಪರಿಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಶ್ರೀಮದ್ರಂಭಾಪುರಿ ಶಾಖಾ ಶ್ರೀ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು.
ಸಮಾರಂಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಸ್.ಗಡ್ಡದ್ದೇವರಮಠ, ಗಂಗಣ್ಣ ಮಹಂತಶೆಟ್ರ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು. ಸವಣೂರಿನ ಡಾ. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.
ಸಮಾರಂಭಕ್ಕೂ ಮುನ್ನ ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಪಲ್ಲಕ್ಕಿ ಉತ್ಸವ, ಧರ್ಮ ರಥೋತ್ಸವ ಹಾಗೂ ಕಡುಬಿನ ಕಾಳಗ ನೆರವೇರಿಸಲಾಯಿತು. ಆಗಮಿಸಿದ ಸಕಲ ಸದ್ಭಕ್ತರಿಗೆ ಅನ್ನ ದಾಸೋಹ ಜರುಗಿತು.