ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ವಸ್ತು ಪ್ರದರ್ಶನಕ್ಕೆ ಚಾಲನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.09:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರ ಯೋಜನೆಗಳ ಕುರಿತು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಿರುವ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ.
ಮಾರ್ಚ್ 8 ರಿಂದ 10 ರವರೆಗೆ ನಡೆಯಲಿರುವ ವಸ್ತು ಪ್ರದರ್ಶನವನ್ನು ಶಾಸಕರು ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಸ್ತು ಪ್ರದರ್ಶನ ಯಶಸ್ವಿಯಾಗಿ ನಡೆಯಲೆಂದು ಹಾರೈಸಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ವಸ್ತು ಪ್ರದರ್ಶನದಲ್ಲಿ ಅಳವಡಿಸಿರುವ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಚಾರ ಮಾಹಿತಿಗಳನ್ನು ವೀಕ್ಷಿಸಿದರು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ವಸ್ತು ಪ್ರದರ್ಶನ ಚೆನ್ನಾಗಿ ಮೂಡಿ ಬಂದಿದೆ ಎಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಪೂರ್ಣವಾಗಿ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆ, ಇನ್ನಿತರ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.
ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಜನರಿಗೆ ಅರಿವು ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಇನ್ನಿತರ ಅಧಿಕಾರಿಗಳು ಇದ್ದರು.