ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೭; ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹೆಚ್ಚಿನ ಗಮನಹರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆಯ ದೂರುಗಳು ಬಂದಾಗ ಅಧಿಕಾರಿಗಳು ಚುನಾವಣೆ ಕೆಲಸ ಎಂದು ಹೇಳದೇ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಪೂರೈಕೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಬೇಸಿಗೆ ಗಂಭೀರವಾಗಿರುವುದರಿಂದ ಕುಡಿಯುವ ನೀರಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ 189 ಗ್ರಾಮ ಪಂಚಾಯಿತಿಗಳಿದ್ದು, 1069 ಗ್ರಾಮಗಳಿವೆ. 19 ಗ್ರಾಮ ಪಂಚಾಯಿತಿಗಳ 47 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈಗಾಗಲೇ 35 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ 364 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವೂ 13 ಅಡಿ ಕೆಳಗೆ ಹೋಗಿದೆ ಎಂದು ತಿಳಿಸಿದ ಅವರು, ಈಗಾಗಲೇ ಖಾಸಗಿ ಬೋರ್‍ವೆಲ್‍ಗಳನ್ನು ಗುರುತಿಸಲಾಗಿದ್ದು, 13 ಬೋರ್‍ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಖಾಸಗಿ ಬೋರ್‍ವೆಲ್‍ಗಳಲ್ಲಿ ನೀರು ಕಡಿಮೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಹಾಗೂ ಹೊಸ ಕೊಳವೆಬಾವಿ ಕೊರೆಸಲು ನಿರ್ಧರಿಸಲಾಗಿದೆ ಎಂದರು.ಜಿಲ್ಲೆಯ ಎಲ್ಲ ತಾಲ್ಲೂಕಿಗೂ ಈಗಾಗಲೇ ಆರ್‍ಡಿಪಿಆರ್ ವತಿಯಿಂದ ರೂ.25 ಲಕ್ಷ  ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ರೂ.2.70 ಕೋಟಿ ಬಿಡುಗಡೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಂದ ತಕ್ಷಣ, ಸ್ಪಂದಿಸಿ ಪರಿಹರಿಸಲಾಗುವುದು. ಜಿಲ್ಲಾ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.