ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಳವಳಿ
ಹುಬ್ಬಳ್ಳಿ,ಮಾ.4: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ, ಜನರ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಸೋಷಲಿಸ್ಟ್ ಯೂನಿಟಿ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಮಾರ್ಚ್ 6 ರಂದು ಬೃಹತ್ ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು SUಅI(ಅ)ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆಯನ್ನು ತಡೆಗಟ್ಟಬೇಕು, ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟ ವ್ಯವಸ್ಥೆಯನ್ನು ಸರ್ಕಾರ ನಿರ್ವಹಿಸಬೇಕು, ಜನವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ತಕ್ಷಣವೇ ಹಿಂಪಡೆಯಬೇಕು, ರಾಜ್ಯ ಮಟ್ಟದಲ್ಲಿ ನೈಜ ಜನ ವಿರೋಧಿ ಶಿಕ್ಷಣ ನೀತಿಯನ್ನು ರೂಪಿಸಬೇಕು, ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಎಲ್ಲರಿಗೂ ಖಾಯಂ ಉದ್ಯೋಗಗಳನ್ನು ಒದಗಿಸಬೇಕು. ಉದ್ಯೋಗ ನೀಡುವ ತನಕ ನಿರುದ್ಯೋಗ ಭತ್ಯೆಯನ್ನು ನೀಡಬೇಕು.
ಸರ್ಕಾರ ಎಲ್ಲರಿಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಆರೋಗ್ಯ ವಲಯದ ಖಾಸಗೀಕರಣವನ್ನು ಸಲ್ಲಿಸಬೇಕು. ಎಲ್ಲಾ ಕರಾಳ ಕಾಯ್ದೆಗಳನ್ನು ರದ್ದು ಮಾಡುವ ಮೂಲಕ ಪ್ರಜಾಪ್ರಭುತ್ವ ಮತ್ತು ನಾಗರಿಕ ಹಕ್ಕುಗಳನ್ನು ರಕ್ಷಣೆ ಮಾಡಬೇಕು, ಮಹಿಳೆಯರ, ದಲಿತರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಯಬೇಕು ಸೇರಿದಂತೆ ವಿವಿಧ ಹಕ್ಕೋತ್ತಾಯಗಳಿಗೆ ಆಗ್ರಹಿಸಲಾಗುವುದು ಎಂದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.