ಸರ್ಕಾರಿ ನೌಕರರು ಆರೋಗ್ಯವಂತರಾಗಿರಿ: ಶಾಸಕ ಮಂಜು
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮಾ.03: ಇಂದಿನ ಒತ್ತಡದ ಸನ್ನಿವೇಶದಲ್ಲಿ ಸರ್ಕಾರಿ ನೌಕರರು ದೈಹಿಕ ಕ್ಷಮತೆ ಕಾಪಾಡಿಕೊಂಡು ಆರೋಗ್ಯವಂತರಾಗುವುದು ಅವಶ್ಯಕವಾಗಿದೆ ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.
ಅವರು ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ವಾಲಿಬಾಲ್ ಆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಮಾನವನ ಅವಿಭಾಜ್ಯ ಅಂಗವಾಗಿದ್ದು ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರು ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿರುತ್ತಾರೆ. ಇಂದು ಸರ್ಕಾರಿ ನೌಕರರು ಒತ್ತಡದ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನೌಕರರು ಪ್ರತಿದಿನ ವಾಕ್ ಮಾಡುತ್ತಿದ್ದಾರೆ. ಆದರೂ ಇಲಾಖೆಗಳ ಕೆಲಸದ ಒತ್ತಡದಿಂದಾಗಿ ಮಾನಸಿಕವಾಗಿ ಕುಗ್ಗುತ್ತಿರುವ ಅವರುಗಳಿಗೆ ಅನೇಕ ಕಾಯಿಲೆಗಳು ಬರುತ್ತಿದ್ದು ಇದಕ್ಕೆ ಅವಕಾಶ ನೀಡದಂತೆ ನೌಕರರು ಪ್ರತಿದಿನ ಉತ್ತಮ ಅಭ್ಯಾಸಗಳು, ದೈಹಿಕ ಕಸರತ್ತು, ಧ್ಯಾನ, ಆಟೋಟ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಒತ್ತಡವನ್ನು ನಿವಾರಿಸುವ ಕೆಲಸ ಮಾಡಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ಮಾತನಾಡಿ ಸರ್ಕಾರಿ ನೌಕರರು ಇಂಥಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ವಿವಿಧ ರೀತಿಯ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು. ಆ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಿಸರ್ಗಪ್ರಿಯ ಕ್ರೀಡಾ ದ್ವಜಾರೋಹಣ ಮಾಡಿದರು.
ಕ್ರೀಡಾಕೂಟದಲ್ಲಿ ತಾ.ಪಂ ಇ.ಓ ಸತೀಶ್ ಸೇರಿದಂತೆ ಹಲವರಿದ್ದರು.