ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದಿಂದ ಪ್ರಜಾಪ್ರಭುತ್ವ ಬಲಿಷ್ಠ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.16-ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಭದ್ರಬುನಾದಿಯಿಂದ ಬಲಿಷ್ಠವಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು.
ಗಡಿಜಿಲ್ಲೆ ಚಾಮರಾಜನಗರದಲ್ಲಿಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶಿಷ್ಟ, ವಿನೂತನವಾಗಿ ಆಚರಿಸಲಾಯಿತು. ಬೀದರ್‍ನಿಂದ ಚಾಮರಾಜನಗರದವರೆಗೆ ರಾಜ್ಯದ 31 ಜಿಲ್ಲೆಗಳನ್ನೊಳಗೊಂಡ ಅತಿ ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಸಚಿವ ಕೆ. ವೆಂಕಟೇಶ್ ಅವರು ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ನಾವು ಇಂದು ಎಲ್ಲೆಡೆ ವಿಶಿಷ್ಟವಾಗಿ ಆಚರಿಸುತ್ತಿದ್ದೇವೆ. ಪ್ರಜಾಪ್ರಭುತ್ವವು ಸಮಾನತೆ ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರಬುನಾದಿ ಮೇಲೆ ನಿಂತಿದೆ. ಈ ಭದ್ರಬುನಾದಿ ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವ ಬಲಿಷ್ಠವಾಗುವುದಿಲ್ಲ. ಅದ್ದರಿಂದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗವಾಗಿದೆ ಎಂದು ಸಚಿವರು ತಿಳಿಸಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007ರಲ್ಲಿ ಅಂಗೀಕರಿಸಿದ ನಿರ್ಣಯದಂತೆ ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಈ ದಿನವು ವಿಶ್ವದ ಪ್ರಜಾಪ್ರಭುತ್ವ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಜಾಗತಿಕವಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ವಿಶ್ವಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರವು ಇಂದು ಎಲ್ಲೆಡೆ ಮಹತ್ವದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವೈಶಿಷ್ಟ್ಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ನಮ್ಮ ರಾಜ್ಯದ ಉತ್ತರ ತುದಿಯಾದ ಬೀದರ್ ಜಿಲ್ಲೆಯಿಂದ ದಕ್ಷಿಣದ ತುದಿ ಗಡಿನಾಡು ಚಾಮರಾಜನಗರ ಜಿಲ್ಲೆಯವರೆಗೆ ಅತೀ ಉದ್ದನೆಯ ಮಾನವ ಸರಪಳಿ ನಿರ್ಮಿಸುವ ಮೂಲಕ ಈ ಬಾರಿ ಪ್ರಜಾಪ್ರಭುತ್ವ ದಿನ ಆಚರಣೆಯನ್ನು ವಿಶೇಷವಾಗಿ ಹಮ್ಮಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.
ಮಾನವ ಸರಪಳಿ ರಚನೆ ರಾಜ್ಯದ 31 ಜಿಲ್ಲೆಯಲ್ಲೂ ನಡೆಯುತ್ತಿದ್ದೂ, ಒಟ್ಟು 25 ಲಕ್ಷ ಜನರು ಪಾಲ್ಗೊಳ್ಳುತ್ತಿದ್ದಾರೆ. 2500 ಕಿಲೋಮೀಟರ್ ಉದ್ದಕ್ಕೂ ಮಾನವ ಸರಪಳಿ ನಿರ್ಮಾಣವಾಗಿದ್ದು, ರಾಜ್ಯಾದ್ಯಂತ 10 ಲಕ್ಷ ಸಸಿಗಳನ್ನು ಸಹಾ ನೆಡಲಾಗುತ್ತಿದೆ ಹೀಗಾಗಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದರು.
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತ ದೇಶದ ರಾಜ್ಯವಾದ ನಮ್ಮ ಕರ್ನಾಟಕದ ಸರ್ಕಾರವು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮೂಲಕ 2023 ನೇ ಸಾಲಿನಲ್ಲಿ ಮೊಟ್ಟಮೊದಲ ಬಾರಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಪ್ರಜಾಪ್ರಭುತ್ವ ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳು, ಇಡೀ ಮನುಕುಲಕ್ಕೆ ಅವರು ಮಾಡಿರುವ ಮಾರ್ಗದರ್ಶನ, ತೋರಿದ ಉನ್ನತ ಹಾದಿಯಲ್ಲಿ ನಾವೆಲ್ಲರೂ ಮುನ್ನಡೆಯೋಣ. ಪ್ರಜಾಪ್ರಭುತ್ವ, ಸಂವಿಧಾನದ ಘನತೆ, ಉನ್ನತ ಮೌಲ್ಯಗಳು ಹಾಗೂ ಧ್ಯೇಯೋದ್ದೇಶಗಳನ್ನು ಎತ್ತಿ ಹಿಡಿಯುವಲ್ಲಿ ಪ್ರತಿಯೊಬ್ಬರ ಹೊಣೆಗಾರಿಕೆ ಇದೆ. ಜಿಲ್ಲೆಯ ಸವಾರ್ಂಗೀಣ ಪ್ರಗತಿಗೆ ಬದ್ಧರಾಗಿ ಒಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ನುಡಿದರು.
ಎಂ.ಎಸ್.ಐ.ಎಲ್. ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿ ಹಿಡಿಯಲು ಜಿಲ್ಲೆಯಲ್ಲಿ ಇಂದು 25 ಕಿ.ಮೀ. ಅಂತರದ ಮಾನವ ಸರಪಳಿ ಏರ್ಪಡಿಸಲಾಗಿದೆ. ವಿಶ್ವಸಂಸ್ಥೆ ನಿರ್ಣಯದಂತೆ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದೇವೆ ಎಂದರು.
ಕಲಾವಿದರಾದ ಬಿ. ಬಸವರಾಜು, ಸಿ.ಎಂ. ನರಸಿಂಹಮೂರ್ತಿ, ರಾಜಪ್ಪ, ಮಂಜುನಾಥ್ ನಾಡಗೀತೆಯನ್ನು ಪ್ರಸ್ತುತಪಡಿಸಿದರು. ಬಳಿಕ ಸಂವಿಧಾನ ಪೀಠಿಕೆಯನ್ನು ವಾಚನ ಮಾಡಲಾಯಿತು. ನಂತರ ಉಸ್ತುವಾರಿ ಸಚಿವರು, ಶಾಸಕರು, ಗಣ್ಯರು ಮಾನವ ಸರಪಳಿಗೆ ಕೈ ಜೋಡಿಸಿದರು. ಅಂತಿಮವಾಗಿ ಜೋಡಿಸಿದ ಕೈಗಳನ್ನು ಮೇಲೆತ್ತಿ ‘ಜೈ ಹಿಂದ್’ ‘ಜೈ ಕರ್ನಾಟಕ’ ಘೋಷಣೆಗಳನ್ನು ಮೊಳಗಿಸಲಾಯಿತು. ಎನ್.ಆರ್.ಎಲ್.ಎಂ. ಮಹಿಳಾ ಸದಸ್ಯರು ದೇಶಭಕ್ತಿ ಗೀತೆಗೆ ನೃತ್ಯ ಮಾಡಿದರು. ತದನಂತರ ಸಸಿ ನೆಟ್ಟು ನೀರೆರೆಯಲಾಯಿತು. ಬಳಿಕ ‘ಸರಪಳಿ ಕಳಚಿದೆ, ಭಾಂಧವ್ಯ ಗಟ್ಟಿಯಾಗಿದೆ ಎಂಬ ಸಂದೇಶ ಫಲಕಕ್ಕೆ ಗಣ್ಯರು ಸಹಿ ಮಾಡಿದರು.
ಚಾಮರಾಜನಗರ ಜಿಲ್ಲೆಯ ಸರಹದ್ದು ಆರಂಭವಾಗುವ ಮೂಗೂರು ಕ್ರಾಸ್‍ನಿಂದ ಪಟ್ಟಣದ ರಾಮಸಮುದ್ರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆವರೆಗೆ ಏರ್ಪಡಿಸಲಾಗಿದ್ದ 25 ಕಿ.ಮೀ. ಉದ್ದದ ಮಾನವ ಸರಪಳಿ ಕಾರ್ಯಕ್ರಮ ಗಮನ ಸೆಳೆಯಿತು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ನಗರಸಭಾ ಅಧ್ಯಕ್ಷ ಸುರೇಶ್, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರಿದ ಅಧ್ಯಕ್ಷ ಅಸ್ಗರ್ ಮುನ್ನ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯುತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಅಬಕಾರಿ ಉಪ ಆಯುಕ್ತ ನಾಗಶಯನ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿಂದ್ಯಾ, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಇತರರು ಕಾರ್ಯಕ್ರಮದಲ್ಲಿ ಇದ್ದರು.
ಆರಂಭದಲ್ಲಿ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ರಾಮಸಮುದ್ರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನಶಿಲ್ಪಿಗೆ ಗೌರವ ಸಲ್ಲಿಸಿದರು.