ಬೇಸಿಗೆ ಪ್ರಾರಂಭ: ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ
ಸಂಜೆವಾಣಿ ವಾರ್ತೆ
ಹನೂರು .ಮಾ.01:- ಬೇಸಿಗೆ ಪ್ರಾರಂಭವಾಗುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಸರಬರಾಜು ಮಾಡಲು ವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಜಿ.ಪಂ. ಕಾರ್ಯದರ್ಶಿ ಹನೂರು ತಾಲೂಕು ಆಡಳಿತಾಧಿಕಾರಿ ಲಕ್ಷ್ಮಿ ಅವರು ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಬುಧುವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದ ಅವರು ಬರ ನಿರ್ವಹಣೆಗೆ 25 ಲಕ್ಷ ರೂ. ಗಳ ಅನುದಾನ ಮೀಸಲಿದ್ದು ಶಾಸಕರ ಸಮಿತಿ ಅತಿ ಬರಪೀಡಿತ ಪ್ರದೇಶಗಳನ್ನು ಗುರುತು ಮಾಡಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಅಡಿ ಮರುಪೂರ್ಣ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡಲು ಕ್ರಮವಹಿಸಬೇಕು, ಪೌಷ್ಟಿಕ ಆಹಾರ ಸೇವನೆಯ ವ್ಯವಸ್ಥೆ ಕೈಗೊಳ್ಳಿ.
ವಿದ್ಯಾರ್ಥಿಗಳ ಅಗತ್ಯಕ್ಕೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಿ, ಹೆಚ್ಚುವರಿ ಶೌಚಾಲಯಗಳು ಇರುವ ಶಾಲೆಗಳ ಬದಲಿಗೆ ಅವಶ್ಯಕತೆ ಇರುವ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳು ಬರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು.
ಕೂಸಿನ ಮನೆ ಸಮರ್ಪಕ ಕಾರ್ಯನಿರ್ವಹಿಸಲು ಕ್ರಮವಹಿಸಬೇಕು, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನರೇಗಾ ಯೋಜನೆ ಅಡಿ ಅರಣ್ಯ ಇಲಾಖೆ ಉದ್ಯೋಗ ನೀಡಬೇಕು ಎಂದರು.
ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಆನೆ ಮತ್ತು ಮಾನವ ಸಂಘರ್ಷ ತಡೆಗಟ್ಟಲು ಅರಣ್ಯ ಇಲಾಖೆಯವರು ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದರು.
ಪಲ್ಸ್ ಪೆÇೀಲಿಯೋ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಸಕಲ ಸೌಕರ್ಯಗಳನ್ನು ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಇಲಾಖೆ ಬಗ್ಗೆ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.
ಮಾಧ್ಯಮಗಳಿಗೆ ಅಭಿನಂದನೆ:
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ ರಾಜ್ಯದಲ್ಲೇ ಮುಂಜೂಣಿ ಸಾಲಿನಲ್ಲಿ ನಿಲ್ಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾಧ್ಯಮಗಳ ಪಾತ್ರವನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎಡಿ ರವೀಂದ್ರ, ಎಇಇ ಆರ್ ಡಿ ಪಿ ಆರ್ ಶಿವಪ್ರಕಾಶ್, ತಾಲೂಕು ವೈದ್ಯಾಧಿಕಾರಿ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವ ಮೂರ್ತಿ , ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.