ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ, ಫೆ.29 :ಜಿಲ್ಲೆಯ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು, ಮಾರ್ಗಸೂಚಿಗಳನ್ವಯ ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ಪರೀಕ್ಷೆ ಮುಗಿಯುವವರೆಗೆ 144ರ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‍ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಅವರು ಆದೇಶಿಸಿದ್ದಾರೆ.