ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ:1,449 ಅಭ್ಯರ್ಥಿಗಳು ಗೈರು
ವಿಜಯಪುರ,ಅ.4: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಪಿಡಿಜೆ ಕಾಲೇಜು ಹಾಗೂ ವಿ.ಬಿ.ದರಬಾರ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ ಇದ್ದರು.
ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಯ ಪರೀಕ್ಷೆಗೆ ಜಿಲ್ಲೆಯಲ್ಲಿ 4,920 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಗೆ 1,449 ಅಭ್ಯರ್ಥಿಗಳು ಗೈರಾಗಿದ್ದು, 3,471 ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.