ನಾಳೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ:ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಸೆ.14: ಸೆಪ್ಟೆಂಬರ್.15 ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಶುಕ್ರವಾರ ಬೀದರನ ಪ್ರತಾಪ ನಗರದಲ್ಲಿರುವ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ ಸೆಪ್ಟೆಂಬರ್.15 ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸೆಪ್ಟೆಂಬರ್.15 ರಂದು ಬಸವಕಲ್ಯಾಣ ಅನುಭವ ಮಂಟಪದಿಂದ ಪ್ರಾರಂಭಗೊಂಡು ಚಾಮರಾಜ ನಗರದವರೆಗೆ ನಡೆಯುವ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಇಲಾಖೆ, ಪೌರಾಡಳಿತ ಮತ್ತು ಹಜ್ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಹಯೋಗದಿಂದ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು. ನಿಗದಿಪಡಿಸಿದ ಕಿಲೋ ಮೀಟರಗಳವರೆಗೆ ಶಾಲಾ-ಕಾಲೇಜಿನ ಮಕ್ಕಳನ್ನು ಬೆಳಿಗ್ಗೆ 8.30 ಗಂಟೆಗೆ ಸರಿಯಾದ ಸಮಯದಲ್ಲಿ ಇರುವಂತೆ ನೋಡಿಕೊಳ್ಳಬೇಕೆಂದರು.
ಅನುಭವ ಮಂಟಪದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 45 ಕಿ.ಮೀಟರ್ ಮಾನವ ಸರಪಳಿ ರಚಿಸುವುದರ ಜೊತೆಗೆ 1 ಕಿ.ಮೀ. ಉದ್ದದ ನಮ್ಮ ರಾಜ್ಯದ ಧ್ವಜ ಹಾಗೂ ರಾಷ್ಟ್ರದ ಧ್ವಜವನ್ನು ಹಿಡಿದು ಮಕ್ಕಳು ಮುನ್ನಡೆಯುವರು. 1 ಕಿ.ಮೀ.ಗೆ ಒಬ್ಬ ಅಧಿಕಾರಿಯನ್ನು ನಿಯೋಜಿಸಲಾಗುವುದು ಇದರಲ್ಲಿ ಸಂವಿಧಾನದ ಪೀಠಿಕೆಯ ವಾಚನ ಇರುತ್ತದೆ ಹಾಗಾಗಿ ಬೀದರ ಜಿಲ್ಲೆಯ ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಾತನಾಡಿ, ರೋಟರಿ ಕ್ಲಬ್ ಸಂಘ-ಸಂಸ್ಥೆ ಪದಾಧಿಕಾರಿಗಳು, ಎನ್.ಜಿ.ಓ.ಗಳು, ಸಾರ್ವಜನಿಕರು ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಹೆಚ್ಚುವರಿ ಪೆÇಲೀಸ್ ಅಧಿಕ್ಷಕರಾದ ಚಂದ್ರಕಾಂತ ಪೂಜಾರ ಅವರು ಮಾತನಾಡಿ, ಮಾನವ ಸರಪಳಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತ ವ್ಯವಸ್ಥೆ ಮಾಡುವುದರ ಜೊತೆಗೆ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಪೆÇಲೀಸ್ ಇಲಾಖೆಯಿಂದ ಎಚ್ಚರಿಕೆ ವಹಿಸಲಾಗುವುದು. ಹೆಚ್ಚಿನ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಮುಂಜಾಗೃತೆಯಾಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಲಾಖೆ ಉಪನಿರ್ದೇಶಕರಾದ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧು ಎಚ್.ಎಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ ಮೋತಿಲಾಲ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಶಿಕ್ಷಣ ಇಲಾಖೆ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.