ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿಗೆ ಡಿಸಿ ಸೂಚನೆ
ತುಮಕೂರು, ಸೆ. ೧೪- ಜನಸ್ಪಂದನ, ಕುಂದುಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿರಾ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ತಮ್ಮ ಮನೆಯ ಕೆಲಸಗಳಂತೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದರು.
ಉದ್ದರಾಮನಹಳ್ಳಿಯ ಮಂಜುನಾಥ್ ಅವರು ರಸ್ತೆ ಒತ್ತುವರಿ ತೆರವುಗೊಳಿಸುವಂತೆ, ಬುಕ್ಕಾಪಟ್ಟಣ ಗ್ರಾಮದ ನಾಗರಾಜು ಅವರು ಪಹಣಿ ಪತ್ರ ನೀಡುವಂತೆ ಹಾಗೂ ದೊಡ್ಡ ಅಗ್ರಹಾರದ ಕೆಂಚಣ್ಣ ಪಡಿತರ ಧಾನ್ಯಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಲು ಕೋರಿ ಅರ್ಜಿ ಸಲ್ಲಿಸಿದರು.
ಸಭೆಯಲ್ಲಿ ಪವತಿ ಖಾತೆ, ರಾಜ ಕಾಲುವೆ ತೆರವು, ಸಾಗುವಳಿ ಚೀಟಿ ಸೇರಿದಂತೆ ಸುಮಾರು ೬೯ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಗಿರಿನಾಥನಹಳ್ಳಿಯ ನಾಗರಾಜು ಎಂಬುವರು ಗ್ರಾಮನಕ್ಷೆ ಕೋರಿ ಸಲ್ಲಿಸಿದ ಅರ್ಜಿಗೆ ಕೂಡಲೇ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಗ್ರಾಮ ನಕ್ಷೆಯನ್ನು ಸ್ಥಳದಲ್ಲಿಯೇ ನೀಡಿದರು.
ಪ್ರಜಾಪ್ರಭುತ್ವ ದಿನಾಚರಣೆ
ಇದಕ್ಕೂ ಮುನ್ನ ತಹಶೀಲ್ದಾರ್ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೆ. ೧೫ ರಂದು ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿರ್ಮಿಸಲಿರುವ ಮಾನವ ಸರಪಳಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಎಲ್ಲಾ ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಹಾಜರಿರಬೇಕು ಎಂದು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸುತ್ತಿರುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ವಿಶ್ವದಲ್ಲಿಯೇ ಮೊದಲ ಬಾರಿಗೆ ಬಹುದೊಡ್ಡ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪ ದೋಷ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮ ಪಂಚಾಯ್ತಿ ಮತ್ತು ಇಲಾಖೆಗಳಿಗೆ ಮಾನವ ಸರಪಳಿಯಲ್ಲಿ ಭಾಗವಹಿಸುವ ಸ್ಥಳವನ್ನು ಗುರುತಿಸಲಾಗಿದ್ದು, ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.