ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲು: ಪ್ರೊ.ವಿಜಯೇಂದ್ರ ಬಾಬು
ಬಳ್ಳಾರಿ,ಸೆ.11: ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡಲಾಗುತ್ತಿದ್ದು, ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಬೆಂಗಳೂರು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆಯ (ಐಎಸ್‌ಇಸಿ) ಸಲಹೆಗಾರ ಹಾಗೂ ಮಾಜಿ ಯೋಜನಾ ನಿರ್ದೇಶಕ ಪ್ರೊ.ವಿಜಯೇಂದ್ರ ಬಾಬು ಹೇಳಿದರು.
ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನೆ ಮತ್ತು ಸಂವಾದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.
ವಿವಿಧ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಅರ್ಜಿಗಳನ್ನು ಆಹ್ವಾನಿಸದೇ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸೂಕ್ತವಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಪಾಲಿಸಬೇಕು ಎಂದರು.
ಅದೇರೀತಿಯಾಗಿ ಒಂದೇ ಫಲಾನುಭವಿಗೆ ಮತ್ತೊಮ್ಮೆ  ಸೌಲಭ್ಯ ನೀಡುವಂತಿಲ್ಲ. ಫಲಾನುಭವಿಗಳು ತಮಗೆ ನೀಡಿರುವ ಉಪಕರಣ ಹಾಗೂ ಸೌಲಭ್ಯಗಳನ್ನು ಸ್ವತ: ಉಪಯೋಗಿಸಿಕೊಂಡಿರುವ ಬಗ್ಗೆ ಇಲಾಖಾಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿಸ್ತುಕ್ರಮ:
ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅನುಷ್ಠಾನಗುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಲ್ಲಿ ಶಿಸ್ತುಕ್ರಮ ಅಥವಾ ಕ್ರಿಮಿನಲ್ ಕ್ರಮಕ್ಕೆ ಒಳಪಡುತ್ತಾರೆ ಎಂದು ಅವರು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಮುಖ್ಯವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಒದಗಿಸಿದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು ಎಂದರು.
ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ವಿವಿಧ ಇಲಾಖಾವಾರು ನೀಡುವ ಸೌಲಭ್ಯಗಳು ಮತ್ತು ಉಪಕರಣಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು