ನಗರ ಪ್ರದೇಶದಲ್ಲಿ ಮಾರಾಟಕ್ಕೆ ಇ-ಖಾತಾ ಕಡ್ಡಾಯ
ಕೋಲಾರ,ಅ,೪-ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ ೨೦೦೬ ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆಯನ್ನು ಮಾಡಲಾಗಿರುತ್ತದೆ ಹಾಗೂ ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ ೧೧-ಇ ಇರುವ ಮೋಜಿಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅ.೫ ರಿಂದ ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ದಿ.೧೮-೦೭-೨೦೧೪ ರಂತೆ ಸಂಯೋಜನೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ತಿಳಿಸಿದ್ದಾರೆ.
ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ (ತಂತ್ರಾಂಶ) ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮದ್ರಾಂಕ ಇಲಾಖೆಯ ಕಾವೇರಿ ೨.೦ ತಂತ್ರಾಂಶದೊಂದಿಗೆ ಪ್ರಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ ೨.೦ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿ:೨೯-೦೧-೨೦೨೦ ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.
ನಗರಾಭಿವೃದ್ಧಿ ಇಲಾಖೆಯ ಕೋಲಾರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಮುಂದುವರೆದು ಕೋಲಾರ ಜಿಲ್ಲೆಯಲ್ಲಿ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-೨ ತಂತ್ರಾಂಶದೊಂದಿಗೆ ದಿನಾಂಕ:೦೭-೧೦-೨೦೨೪ ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ. ಆದ ಕಾರಣ ದಿನಾಂಕ:೦೭-೧೦-೨೦೨೪ ರಿಂದ ಕೋಲಾರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು.
ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಇ-ಆಸ್ತಿ ತಂತ್ರಾಂಶದಿಂದಾ ಇ-ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾ ದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವುದು. ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುಬೇಕೆಂದು ಜಿಲ್ಲಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.