ಸರ್ಕಾರಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ
ಸಂಜೆವಾಣಿ ನ್ಯೂಸ್
ಮೈಸೂರು:ಸೆ.10:– ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಸೋಮವಾರ ನಗರದ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನವೀಕೃತ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಜನರ ಹಕ್ಕು ಮತ್ತು ರಕ್ಷಣೆಗೆ ಸಮರ್ಪಿಸಬೇಕಿದೆ. ಸಮಾಜ ಸೇವೆಗೆಂದು ಆಯ್ಕೆಯಾಗಿರುವ ನಾವು ಸಮಾಜಕ್ಕೆ ನಮ್ಮ ಬದುಕನ್ನು ಮುಡಿಪಿಡಬೇಕಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗುವಂತೆ ಮಾಡಲು ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಹೇಳಿದರು.
ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಸಾಮಾನ್ಯ ಜನರ ಏಳಿಗೆಗೆ ದುಡಿಯಬೇಕು. ಕಾನೂನಿನ್ವಯ ಕೆಲಸ ಮಾಡುವ ಮೂಲಕ ಯಾವಾಗಲೂ ಜನಪರವಾಗಿರಬೇಕು. ಶೋಷಿತರಿಗೆ, ದಮನಿತರಿಗೆ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಅಭಿವೃದ್ಧಿಯ ಕೇಂದ್ರ ಬಿಂದು ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲು ನೌಕಕರ ಶ್ರಮ ಬಹಳಷ್ಟಿದೆ. ನೌಕರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಸೂಕ್ತ ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಾ ಬಂದಿದೆ ಎಂದು ಹೇಳಿದರು.
ಶಾಸಕ ಹರೀಶ್ ಗೌಡ ಮಾತನಾಡಿ, ನಮ್ಮ ಸರ್ಕಾರ 7ನೇ ವೇತನ ಆಯೋಗ ಜಾರಿ ಮಾಡಿದೆ. ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಸಂಘಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.