ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ: ಪ್ರಿಯಾಂಕ್
ಕಲಬುರಗಿ,ಸೆ 9: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಸಂಪುಟದಲ್ಲಿ ನಡೆದಿಲ್ಲ ಅದು ಮಾಧ್ಯಮಗಳಲ್ಲಿ ಮಾತ್ರ ನಡೆದಿದೆ. ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ಶಿವಾನಂದ ಪಾಟೀಲರು ಈ ವಿಚಾರದಲ್ಲಿ ಮಾತನಾಡಿರುವುದು ಗೊತ್ತಿದೆ. ಸಿಎಂ ಖುರ್ಚಿ ಖಾಲಿ ಇಲ್ಲ. ಯಾರೇ ಸಿಎಂ ಆದರೂ ಬೆಂಬಲವಿದೆ ಎಂದಷ್ಟೆ ಹೇಳಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ನಗರದಲ್ಲಿ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಸಾಮಾನ್ಯವಾಗಿ ಸಚಿವ ಸಂಪುಟ ಸಭೆಯಲ್ಲಿ ಇಡೀ ರಾಜ್ಯದ ಅಭಿವೃದ್ದಿ ಕುರಿತಂತೆ ಚರ್ಚೆ ನಡೆಯುತ್ತದೆ. ಆದರೆ, ಬಹಳ ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ನಮ್ಮ ಭಾಗದ ಜನರ ಆಶಯದಂತೆ ಚರ್ಚೆ ನಡೆಸಿ ಅಭಿವೃದ್ದಿಯ ನೀಲಿನಕ್ಷೆ ತಯಾರಿಸಲಾಗುವುದು ಎಂದರು.
ನಿಪುಣ ಕರ್ನಾಟಕ ಯೋಜನೆ:
ಕಕ ಭಾಗದದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ” ಈ ನಿಟ್ಟಿನಲ್ಲಿ ಈಗಾಗಲೇ ಕೌಶಲ್ಯಾಭಿವೃದ್ದಿ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಂಟಿ ವತಿಯಿಂದ ” ನಿಪುಣ – ಕರ್ನಾಟಕ ” ಎನ್ನುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಯುವಕರಿಗೆ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆ ಇದ್ದು ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ ” ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.
ಶಾಸಕರ, ಅಧಿಕಾರಿಗಳ ಸಭೆ:
ಸಚಿವ ಸಂಪುಟ ಸಭೆ ನಡೆಸುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಗತ್ಯವಿರುವ ಯೋಜನೆಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲು ಈಗಾಗಲೇ ಸಂಬಂಧಿಸಿದ ಕ್ಷೇತ್ರಗಳ ಶಾಸಕರ ಹಾಗೂ ಅಧಿಕಾರಿಗಳ ಜೊತೆ ಎರಡು ಸುತ್ತಿನ ವಿಡಿಯೋ ಕಾನ್ಫರೆನ್ಸ್ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮುಖ್ಯ ಕಾರ್ಯದರ್ಶಿ ಜತೆ ಸಭೆ:
ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ನಾಳೆ ಸಭೆ ನಡೆಸಲಾಗುವುದು. ಇದೇ ರೀತಿ ಸಚಿವರ ಸಭೆ ನಡೆಸಲು ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಪ್ರತ್ಯೇಕ ಸಚಿವಾಲಯ:
371 (ಜೆ) ಕಟ್ಟುನಿಟ್ಟಾಗಿ ಜಾರಿಗೆ ತರಲು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಕುರಿತಂತೆ ಬೇಡಿಕೆ ಎದ್ದಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಕುರಿತು ಸಹ ಚರ್ಚಿಸಲಾಗುವುದು. 371 (ಜೆ) ಅಡಿ ಈ ಭಾಗದಲ್ಲಿ 22,000 ಇಂಜಿನಿಯರಿಂಗ್ ಹಾಗೂ 2000 ವೈದ್ಯಕೀಯ ಸೀಟು ಹಂಚಿಕೆಯಾಗಿವೆ. ಇದೂ ಸಹ ಕಟ್ಟುನಿಟ್ಟಿನ ಜಾರಿಯಲ್ಲವೇ? ಈ ಬಗ್ಗೆ ಟೀಕೆಗಳು ಸಹಜ. ಆದರೆ, ನಮ್ಮ ಪ್ರಾಮಾಣಿಕ ಪ್ರಯತ್ನ ನಡೆಯಲಿದೆ ಎಂದರು.
ರಾಜ್ಯಪಾಲರ ಅಧಿಕಾರ ದುರ್ಬಳಕೆ:
ಸಿದ್ದಾರ್ಥ ಟ್ರಸ್ಟ್ ಗೆ ಭೂಮಿ ಮಂಜೂರು ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದೆ. ಈ ಬಗ್ಗೆ ಮೊದಮೊದಲು ಜೋರಾಗಿ ಆರೋಪ ಮಾಡಿದ್ದ ವಿರೋದ ಪಕ್ಷದ ನಾಯಕರು ಹಾಗೂ ಬಿಜೆಪಿ ಅಧ್ಯಕ್ಷರು ಈಗ ಮೌನವಾಗಿದ್ದಾರೆ. ಶಿಕ್ಷಣ ಸಂಸ್ಥೆ ನಡೆಸಲು ಅನುಮತಿ ಪಡೆದುಕೊಂಡು ಈಗ ಬಿರಿಯಾನಿ ಹೊಟೇಲ್ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಕೂಡಲೇ ಕ್ರಮ ಜರುಗಿಸುವ ರಾಜ್ಯಪಾಲರು ಈಗ ಏಕೆ ಕ್ರಮ ಜರುಗಿಸಿಲ್ಲ. ಹಾಗೇ ಕುಮಾರಸ್ವಾಮಿ ವಿರುದ್ದದ ದೂರಿನ ಬಗ್ಗೆಯೂ ಕ್ರಮವಿಲ್ಲ ಯಾಕೆ ? ಎಲ್ಲಿ ಬಿಜೆಪಿ ಬಲಹೀನವಾಗಿದೆಯೋ ಅಲ್ಲಲ್ಲಿ ರಾಜ್ಯಪಾಲರ ಅಧಿಕಾರವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಜಂಟಿ ಸಮೀಕ್ಷೆ:
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹೆಸರು, ತೊಗರಿ, ಉದ್ದು ಬೆಳೆ ಹಾಳಾಗಿದ್ದು, ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸರ್ವೆಗೆ ಸೂಚಿಸಲಾಗಿದೆ. ಈಗಾಗಲೇ 15,000 ರೈತರು ದೂರು ಸಲ್ಲಿಸಿದ್ದು ಸಮೀಕ್ಷೆ ವರದಿ ಬಂದ ನಂತರ ಬೆಳೆ ಹಾಳಾದ ಸಂಪೂರ್ಣ ವಿವರ ದೊರಕಲಿದೆ ಎಂದರು.
ರಸ್ತೆ ಗುಂಡಿ ಮುಚ್ಚಲು ಅನುದಾನ:
ಮಳೆಯಿಂದ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು ಗುಂಡಿ ಮುಚ್ಚಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಎರಡು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಸದ್ಯ ಮಳೆ ಸುತಿಯುತ್ತಿರುವುದರಿಂದ ಕೆಲಸ ನಡೆಯುತ್ತಿಲ್ಲ. ಸ್ವಲ್ಪ ಮಳೆ ನಿಂತ ನಂತರ ಗುಂಡಿ ಮುಚ್ಚುವ ಕೆಲಸ ನಡೆಯಲಿದೆ. ಭೀಮಾ ಬ್ರಿಜ್ ಹಾಗೂ ದಂಡೋತಿ ಬ್ರಿಜ್ ಮೇಲಿನ ರಸ್ತೆ ರಿಪೇರಿಗಾಗಿ ಕೆಆರ್ ಐಡಿ ಎಲ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಹನಿಟ್ರ್ಯಾಪ್ ಕಪ್ಪುಚುಕ್ಕೆ
ಕಲಬುರಗಿ ಜಿಲ್ಲೆಯಲ್ಲಿ ಹನಿಟ್ರ್ಯಾಪ್ ನಡೆದಿರುವ ಕುರಿತಂತೆ ಈಗಾಗಲೇ ದೂರು ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಫೆÇೀರೆನ್ಸಿಕ್ ವರದಿ ಕೇಳಲಾಗಿದ್ದು ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆಚ್ಚಿನ ವಿವರ ಈಗಲೇ ಹೇಳಲು ಆಗದು. ಹನಿಟ್ರ್ಯಾಪ್ ಕಲಬುರಗಿ ಜಿಲ್ಲೆಗೆ ಒಂದು ಕಪ್ಪುಚುಕ್ಕೆಯಾಗಿದೆ. ಆರೋಪಿಗಳು ಯಾವುದೇ ಸಂಘಟನೆಗೆ ಸೇರಿದವರಾಗಿರಲಿ ಅಥವಾ ಯಾವುದೇ ವ್ಯಕ್ತಿಗಳಾಗಿರಲಿ, ಪೆÇಲೀಸ್ ತನಿಖೆ ನಂತರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಸೆನ್ ಇಲಾಖೆಗೆ ಸೂಚಿಸಲಾಗಿದೆ. ಹನಿಟ್ರ್ಯಾಪ್ ಗೆ ಸಂಬಂಧಿಸಿದಂತೆ ಏನಾದರೂ ದೂರುಗಳಿದ್ದರೆ ನೊಂದವರು ನೇರವಾಗಿ ನನಗೆ ಇಲ್ಲವೇ ನಗರ ಪೆÇಲೀಸ್ ಕಮೀಷನರ್ ಅವರಿಗೆ ದೂರು ಸಲ್ಲಿಸಬಹುದು. ಅಂಥವರ ವಿವರ ಹಾಗೂ ಗುರುತು ಗೌಪ್ಯವಾಗಿಡಲಾಗುವುದು ಎಂದರು.
ಜಿಲ್ಲೆಯಲ್ಲಿ ನಡೆಯುತ್ತಿದ್ದ ಜೂಜು ಸೇರಿದಂತೆ ಹಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶೇ.50ರಷ್ಟು ಕಡಿವಾಣ ಬಿದ್ದಿದೆ. ಸಮಾಜದಲ್ಲಿ ಎಲ್ಲವೂ ಒಮ್ಮೆಲೆ ಸುಧಾರಣೆ ಕಷ್ಟಸಾಧ್ಯ, ಆದರೂ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಮ್ಮ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ಸಚಿವರು ಹೇಳಿದರು.