ಗಣೇಶ ಚತುರ್ಥಿ, ಈದ್‍ಮಿಲಾದ್ ಹಿನ್ನೆಲೆ ಪೂರ್ವಸಿದ್ಧತೆಗೆ ಅಧಿಕಾರಿಗಳಿಗೆ ಕನೀಜ್ ಫಾತಿಮಾ ಸೂಚನೆ
ಕಲಬುರಗಿ,ಸೆ.6: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬ ಏಕಕಾಲಕ್ಕೆ ಬಂದಿರುವುದರಿಂದ ಎರಡು ಸಮುದಾಯದವರು ಹಬ್ಬವನ್ನು ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಆಚರಿಸಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಸೂಚನೆ ನೀಡಿದರು.
ಗುರುವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಮತ್ತು ಜೆಸ್ಕಾಂ ಅಧಿಕಾರಿಗಳೊಂದಿಗೆ ಹಬ್ಬಗಳ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದರು.
ಹಬ್ಬದ ಸಂದರ್ಭದಲ್ಲಿ ನಿಯಮಿತ ಕುಡಿಯುವ ನೀರು ಪೂರೈಸಬೇಕು. ನಗರದಾದ್ಯಂತ ಸ್ವಚ್ಛತೆ, ನೈರ್ಮಲ್ಯ ಕಾಪಾಡಬೇಕು. ರಸ್ತೆ ಗುಂಡಿ ಮುಚ್ಚಬೇಕು. ಗಣೇಶ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗಬೇಕು ಎಂದರು.ಸಭೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಪಾಲಿಕೆ ಸದಸ್ಯ ಸೈಯದ್ ಅಹ್ಮದ್, ಅಜಮಲ್ ಗೋಲಾ, ವಾಹೆದ್ ಅಲಿ ಫಾತೆಖಾನಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಮುಖಂಡ ಫರಾಜ್ ಉಲ್ ಇಸ್ಲಾಂ ಸೇರಿದಂತೆ ಅನೇಕರು ಇದ್ದರು.