ಪ್ರತಿಭೆ ಗುರುತಿಸುವ ಕಾರ್ಯ ಅಗತ್ಯ
ಹುಳಿಯಾರು, ಸೆ. ೬- ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಹೊರತೆಗೆಯುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ನಟರಾಜ ಅರಸ್ ಹೇಳಿದರು.
ಹೋಬಳಿಯ ಬರಕನಹಾಲ್‌ನಲ್ಲಿ ಸಾರ್ವಜನಿಕ ಶಿಕ್ಷ ಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡಾ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.
ಸಿಆರ್‍ಪಿ ಶಿವಗಂಗಮ್ಮ ಮಾತನಾಡಿ, ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆಯನ್ನು ಪ್ರದರ್ಶಿಸಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಿತೇಂದ್ರ ವಹಿಸಿದ್ದರು. ಮುಖ್ಯ ಶಿಕ್ಷಕ ಜಿ.ಆರ್.ಚಂದ್ರಯ್ಯ, ಶಿಕ್ಷಕ ಬೀರಯ್ಯ ಮತ್ತಿತರರು ಉಪಸ್ಥಿತರಿದ್ದರು.