ನಮ್ಮ ದೇಶ ಗುರು ಪರಂಪರೆಯಲ್ಲಿ ತನ್ನದೇ ಆದ ಮಹತ್ವ ಹೊಂದಿದೆ: ಯದುವೀರ್
ಸಂಜೆವಾಣಿ ನ್ಯೂಸ್
ಮೈಸೂರು: ಸೆ.06:– ನಮ್ಮ ದೇಶ ಗುರು ಪರಂಪರೆಯಲ್ಲಿ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಇದರ ಸ್ಮರಣಾರ್ಥವಾಗಿ ಇಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾನಿಲಯದವರಾದ ರಾಧಾಕೃಷ್ಣನ್ ಅವರು ಮೈಸೂರಿನೊಂದಿಗೆ ಅವಿನಾಭಾವ ಸಂಬoಧವನ್ನು ಹೊಂದಿದ್ದರು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಮೈಸೂರು ಇವರ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ “ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ”ದಲ್ಲಿ ಮಾತನಾಡಿದ ಅವರು, ರಾಧಾಕೃಷ್ಣನ್ ಅವರು ಒಬ್ಬ ಮಹಾನ್ ಶಿಕ್ಷಕ ಎಂಬುದಕ್ಕೆ ಅವರು ದೆಹಲಿಗೆ ತೆರಳುವ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಅವರನ್ನು ಬೀಳ್ಕೊಟ್ಟ ಪರಿಯೇ ಉದಾಹರಣೆಯಾಗಿದೆ ಎಂದರು.
ನಮ್ಮ ದೇಶದ ಸಂಸ್ಕೃತಿಯಲ್ಲಿ ತಾಯಿಯೇ ಮೊದಲ ಗುರು ಎಂಬ ಪ್ರತೀತಿಯಿದೆ. ಇದಕ್ಕೆ ಮಾದರಿಯಾಗಿ ಸಾವಿತ್ರಿ ಬಾಫುಲೆ ಅವರು ದೇಶದಲ್ಲಿ ಮೊದಲ ಬಾರಿಗೆ ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಮತ್ತು ಮಹತ್ವದ ಬಗ್ಗೆ ಅರಿವು ಮೂಡಿಸಿ ಅಕ್ಷರದ ಜ್ಞಾನ ದೀವಿಗೆ ಹೊತ್ತಿಸಿದರು ಎಂದರು.
ಶಾಸಕ ಕೆ.ಹರೀಶ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಶಾಸಕರಾದ ಅಡಗೂರು ಹೆಚ್.ವಿಶ್ವನಾಥ್, ಸಿ.ಎನ್. ಮಂಜೇಗೌಡ, ಕೆ.ವಿವೇಕಾನಂದ, ಜೆ.ಎಸ್.ಎಸ್ ಕಾಲೇಜು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸಹಾಯಕ ಪ್ರಾಧ್ಯಾಪಕ ಡಾ.ಭೀಮರಾಜು ಈರೇಗೌಡ, ಶಾಸಕ ಟಿ.ಎಸ್ ಶ್ರೀವತ್ಸ, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವಿಭಾಗೀಯ ಕಾರ್ಯದರ್ಶಿ ಡಾ.ಪಾಂಡುರoಗ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.