ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರಿಂದ ಮನವಿ
ಬ್ಯಾಡಗಿ, ಸೆ5: ರೈತರಿಗೆ ಬರ ಪರಿಹಾರ ವಿತರಣೆ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮೆಕ್ಕೆ ಜೋಳ ಖರೀದಿ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಾಲೂಕಿನ ರೈತ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದರು.
ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಅವರು, ಕಳೆದ ವರ್ಷ ಅನಾವೃಷ್ಟಿಯಿಂದ ತತ್ತರಿಸಿದ್ದ ಹಾವೇರಿ ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಿದ್ದರೂ ಸಹ ಎಲ್ಲ ರೈತರಿಗೂ ಬರ ಪರಿಹಾರ ವಿತರಣೆಯಾಗಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಿ ಬರ ಪರಿಹಾರ ವಿತರಣೆ ಮಾಡಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಆಗ್ರಹಿಸಿದರು.
ತಾಲೂಕಾ ಕಾರ್ಯಾಧ್ಯಕ್ಷ ಕಿರಣ ಗಡಿಗೋಳ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೈತ ಉತ್ಪಾದಕ ಕಂಪನಿಗಳು ಅನುದಾನದ ಕೊರತೆಯಿಂದ ಬಳಲುತ್ತಿವೆ. ಈಗಾಗಲೇ ತಾಲೂಕಿನಲ್ಲಿ ತೆರೆದಿರುವ ಉತ್ಪಾದಕ ಕಂಪನಿಯು ಸರ್ಕಾರದ ಅನುದಾನ ಬಿಡುಗಡೆಯಾಗದೇ ಅಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಗೌರವಧನ ನೀಡಲು ಹಾಗೂ ಇತರೆ ಕಾರ್ಯ ಚಟುವಟಿಕೆಗಳನ್ನು ಬಹಳಷ್ಟು ತೊಂದರೆಯನ್ನು ಅನುಭವಿಸುವಂತಾಗಿದೆ. ಉತ್ಪಾದಕ ಕಂಪನಿಗಳಿಗೆ ಸಕಾಲಕ್ಕೆ ಅನುದಾನ, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಉಚಿತ ನಿವೇಶನ ಅಥವಾ ಸರ್ಕಾರಿ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಯೋಗಿ ಶಿರೂರ, ಸುರೇಶ ಯತ್ನಳ್ಳಿ, ರೈತ ಮುಖಂಡರಾದ ಗಂಗಣ್ಣ ಎಲಿ, ಮೌನೇಶ ಕಮ್ಮಾರ, ಜಾನ್ ಪುನೀತ್, ಚಿಕ್ಕಪ್ಪ ಛತ್ರದ ಮಲ್ಲೇಶಪ್ಪ ಡಂಬಳ, ಶಶಿಧರ ಯತ್ನಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.