ಕಾಂಗ್ರೆಸ್ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿದೆ
ಸಂಜೆವಾಣಿ ನ್ಯೂಸ್
ಮೈಸೂರು:ಸೆ.05-ಕಾಂಗ್ರೆಸ್ ಪಕ್ಷ ವಾಮ ಮಾರ್ಗದ ಮೂಲಕ ನಂಜನಗೂಡು ನಗರಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ದೂರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ನಂಜನಗೂಡು ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತವಿದ್ದರೂ ಅಧಿಕಾರ ಕೈ ತಪ್ಪಿದ ಕುರಿತು ಮಾತನಾಡಿದ ಅವರು, ಮತದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್‍ನಲ್ಲಿ ಇದ್ದರೆಂದು ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜೆಡಿಎಸ್‍ನ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜೆಡಿಎಸ್‍ನ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿದ್ದಾರೆ ಎಂದು ಕಿಡಿಕಾರಿದರು.
ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಈ ನಾಲ್ವರು ಸದಸ್ಯರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ದವೂ ಕಾನೂನು ಹೋರಾಟ ನಡೆಸಲಾಗುತ್ತದೆ. ಈ ಮೂಲಕ ಪಕ್ಷ ವಿರೋಧಿ ಕೃತ್ಯಗಳಲ್ಲಿ ತೊಡಗುವವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಮುಖಂಡರಾದ ಚಿಕ್ಕರಂಗನಾಯಕ, ಎಸ್.ಮಹದೇವಯ್ಯ ಇದ್ದರು.