ಪರಿಸರಸ್ನೇಹಿ ಗಣೇಶ ಮೂರ್ತಿ ಪರಿಷ್ಠಾಪನೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಲಹೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.03-ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸಲಹೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ಮಂಡಳಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆ ಪ್ರಯುಕ್ತ ಮಣ್ಣಿನ ಕಲಾಕೃತಿ ತಯಾರಿಕೆ ಕುರಿತು ವಿವಿಧ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗಣೇಶ ಹಬ್ಬ ಎಂದರೆ ಎಲ್ಲರು ಭಕ್ತಿ-ಭಾವ, ಸಂಭ್ರಮ, ಸಡಗರದಿಂದ ಆಚರಿಸುವ ಹಬ್ಬವಾಗಿದೆ. ಹಾಗೆಯೇ ಪರಿಸರ ಸಮತೋಲನವನ್ನು ನಾವೆಲ್ಲರೂ ಕಾಪಾಡಿಕೊಳ್ಳಬೇಕಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಬಣ್ಣಬಣ್ಣದ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ನಮ್ಮ ಸುತ್ತಲಿನ ನಿರ್ಮಲ ಪರಿಸರಕ್ಕೆ ಹಾನಿಕಾರಕವಾಗಲಿದೆ. ಬಣ್ಣಕ್ಕಿಂತ ಪರಿಸರ ಮುಖ್ಯ. ಹಾಗಾಗಿ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ರಚಿಸಿಕೊಳ್ಳಬಹುದಾಗಿದೆ. ಬದಲಾವಣೆ ಎನ್ನುವುದು ಮೊದಲು ಮಕ್ಕಳಿಂದಲೇ ಆರಂಭವಾಗಬೇಕು. ಮಕ್ಕಳು ತಮ್ಮ ಪೋಷಕರಿಗೂ, ನೆರೆಹೊರೆಯವರಿಗೂ ಮಣ್ಣಿನಿಂದಲೇ ತಯಾರಿಸಿದ ವಿಗ್ರಹಗಳನ್ನು ಬಳಸುವಂತೆ ತಿಳಿಹೇಳಬೇಕು ಹಾಗೂ ಮನವೊಲಿಸಬೇಕು ಎಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರತಿವರ್ಷ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಖರೀದಿಸುವುದಿಲ್ಲವೆಂದು ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕು ಎಂದರು.
ಇದೇ ವೇಳೆ ಗುಂಡ್ಲುಪೇಟೆ ತಾಲೂಕು ದೊಡ್ಡತುಪ್ಪೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗಣೇಶ್ ಅವರು ಮಣ್ಣಿನ ಗಣಪತಿ ಮೂರ್ತಿಯನ್ನು ತಯಾರಿಸುವ ಕಲೆಗಾರಿಕೆಯನ್ನು ಪ್ರಾತ್ಯೇಕ್ಷಿಕೆ ಮೂಲಕ ಶಾಲಾ ಮಕ್ಕಳಿಗೆ ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಣ್ಣಿನಿಂದ ತಯಾರಾದ ಗಣೇಶ ಮೂರ್ತಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ. ಪ್ರಾದೇಶಿಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಉಮಾಶಂಕರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್. ಶಂಕರ್. ಲಕ್ಷ್ಮಿಪತಿ. ಇತತರು ಇದೇ ಸಂದರ್ಭದಲ್ಲಿ ಇದ್ದರು.