ಬಾಲ ಭವನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ:ಭಂವರ್ ಸಿಂಗ್‌ ಮೀನಾ
ಕಲಬುರಗಿ:ಆ.31: ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನ ಬಳಿಯಿರುವ ಬಾಲ ಭವನ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ಕೆಡವಿ ಅಲ್ಲಿಯೇ ಹೊಸದಾಗಿ ಬಾಲ ಭವನ ನಿರ್ಮಾಣ ಮಾಡಲು ಸರ್ಕಾರಕ್ಕೆ‌ ಪ್ರಸ್ತಾವನೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಸೂಚಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲ ಭವನ, ಸಾಂತ್ವನ ಯೋಜನೆ, ಸ್ತ್ರೀ ಶಕ್ತಿ ಹಾಗೂ ಶಿಶು ಪಾಲನಾ ಕೇಂದ್ರಗಳ ಜಿಲ್ಲಾ ಮಟ್ಟದ ಸಮನ್ವಯ ‌ಸಮಿತಿಗಳ ಸಭೆ ನಡೆಸಿದ ಅವರು, ಕ್ಟಡ ಹಳೆದಾಗಿದ್ದು, ಮಕ್ಕಳ ಹಿತದೃಷ್ಟಿಯಿಂದ ನೂತನ ಭವನ ನಿರ್ಮಿಸಬೇಕು ಎಂದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಬಾಲ ಭವನದಲ್ಲಿ ನಿರಂತರವಾಗಿ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕಲಿಕೆಗೆ ಅದು ಪೂರಕವಾಗಿರಬೇಕು ಎಂದ ಅವರು ಬಾಲ ಭವನವು ಮಕ್ಕಳನ್ನು ಸೆಳೆಯುವಂತೆ ಪರಿಸರ ನಿರ್ಮಿಸಿ ಎಂದು ಸಲಹೆ ನೀಡಿದರು.
ಹೊಸ ತಾಲ್ಲೂಕುಗಳಲ್ಲಿ ಸಾಂತ್ವನ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿ ಪತ್ರಿಕಾ ಪ್ರಕಟಣೆ ಹೊರಡಿಸಬೇಕು. ಸಾಂತ್ವನ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ತರಬೇತಿ ಹಮ್ಮಿಕೊಳ್ಳುವಂತೆ ಭಂವರ್ ಸಿಂಗ್‌ ಮೀನಾ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಯಡಿ ನಿರ್ಮಿಸುತ್ತಿರುವ ಅಂಗನವಾಡಿ ಕಟ್ಟಡಗಳ ಪ್ರಗತಿ ಪರಿಶೀಲಿಸಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಎಲ್ಲರು ಶ್ರಮಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಆರ್.ಬಿ.ಎಸ್.ಕೆ ತಂಡದಿಂದ ವೈದ್ಯಕೀಯ ತಪಾಸಣೆ ಮಾಡಿದಾಗ ಹೆಚ್ವಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಮಕ್ಕಳ ಪೋಷಕರಿಗೆ ಮಾಹಿತಿ ನೀಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ ಅವರು ವಿವಿಧ ಯೋಜನೆಗಳಲ್ಲಿ ಇದೂವರೆಗೆ ಸಾಧಿಸಿದ ಪ್ರಗತಿಯನ್ನು ಸಭೆಗೆ ಮಂಡಿಸಿದ್ದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ಸಹಾಯಕ ಪೋಲಿಸ್ ಆಯುಕ್ತೆ ಬಿಂದು ರಾಣಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಶರಣಬಸಪ್ಪ ಖ್ಯಾತನಾಳ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಿನ ಸಿ.ಡಿ.ಪಿ.ಓ ಗಳು ಮತ್ತು ಸಾಂತ್ವನ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.