ರೈತರನ್ನು ಒಕ್ಕಲೆಬ್ಬಿಸದಂತೆ ಶಾಸಕರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮನವಿ
ಸಂಜೆವಾಣಿ ವಾರ್ತೆ
ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು ೪೦ ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ ಮಾಡಿಕೊಂಡು ಬಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಶಾಸಕ ಕೆ.ಎಸ್.ಬಸವಂತಪ್ಪ, ಬೆಂಗಳೂರಿನಲ್ಲಿ ಶನಿವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಶುಂಗಾರಬಾಗ್ ಮತ್ತು ಕಂಚಗಾರ್ತಿಕಟ್ಟೆ ಗ್ರಾಮಗಳ ವ್ಯಾಪ್ತಿಯಲ್ಲಿರುವ ಸರ್ವೆ ನಂ.೧೬ರಲ್ಲಿ ಸುಮಾರು ೩೦ರಿಂದ ೩೫ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದಾರೆ. ಈ ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳು ಸಹ ಇವೆ. ಈ ಗ್ರಾಮಗಳ ರೈತರು ಸುಮಾರು ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಶಿವಮೊಗ್ಗ ಜಿಲ್ಲೆಗೆ ಸೇರಿದ ಸಂದರ್ಭದಲ್ಲಿ ಮೇಲ್ಕಂಡ ಗ್ರಾಮಗಳಲ್ಲಿ ವಾಸಿಸುತ್ತಿರುವವರಿಗೆ ನಿವೇಶನ ಮತ್ತು ಜಮೀನುಗಳಿಗೆ ಸಂಬಂಧಿಸಿದಂತೆ ಹಕ್ಕುಪತ್ರ ಕೂಡ ವಿತರಿಸಲಾಗಿದೆ. ಇಷ್ಟಿದ್ದರೂ ಪ್ರಸ್ತುತ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು ಮೇಲ್ಕಂಡ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರನ್ನು ಹಾಗೂ ಅವರು ಉಳುವೆ ಮಾಡಿ ಜೀವನ ಸಾಗಿಸುತ್ತಿರುವ ಜಮೀನುಗಳನ್ನು ತೆರವುಗೊಳಿಸುವಂತೆ ಅವರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿದರು