ಮಹಿಳೆಯರ ಸೂಕ್ತ ರಕ್ಷಣೆಗೆ ಒತ್ತಾಯ
ಹುಳಿಯಾರು, ಆ. ೩೧- ದೇಶದಲ್ಲಿ ಇತ್ತೀಚೆಗೆ ಮಕ್ಕಳು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಕ್ಕಳು ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹುಳಿಯಾರಿನ ಸಾಮಾಜಿಕ ಹೋರಾಟಗಾರ್ತಿ ಆಸಿಡ್ ಜಯಲಕ್ಷ್ಮಿ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಪ್ರಕರಣ, ತಮಿಳುನಾಡಿನ ಕೃಷ್ಣಗಿರಿಯ ಬಾಲಕಿಯ ಮೇಲಿನ ಅತ್ಯಾಚಾರ, ಬೆಂಗಳೂರಿನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಯತ್ನ, ಬಿಹಾರದ ಮುಜಾಫುರದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇಂತಹ ಪ್ರಕರಣಗಳ ವಿರುದ್ಧ ರಾಜ್ಯ ಮತ್ತು ಕೇಂದ್ರ ಸರ್ಕಾರ ಕಠಿಣ ಕಾನೂನು ರೂಪಿಸಬೇಕು. ಅಪರಾಧಿಗಳನ್ನು ಶೀಘ್ರ ಬಂಧಿಸಿ, ಅವರಿಗೆ ಉಗ್ರ ಶಿಕ್ಷೆ ನೀಡಬೇಕು. ಇನ್ನು ಮುಂದೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ತಾಲ್ಲೂಕಿನಲ್ಲಿರುವ ಶಾಲಾ?ಕಾಲೇಜು, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಹೆಚ್ಚುವರಿಯಾಗಿ ಗಸ್ತು ಪೋಲಿಸ್ ನೇಮಿಸಬೇಕು. ಕಾಲೇಜು ಪ್ರಾರಂಭವಾಗುವ ಸಮಯ ಮತ್ತು ಬಿಡುವ ಸಮಯದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಶಾಲಾ?ಕಾಲೇಜುಗಳಲ್ಲಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.