ಸೌಹಾರ್ದದಿಂದ ಗೌರಿ ಗಣೇಶ, ಈದ್ ಮಿಲಾದ್ ಆಚರಿಸಲು ಡಿಸಿ ಕರೆ
ಕೋಲಾರ, ಆ,೩೧- ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ಹೇಳಿದರು.
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಂದು ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೋಲಾರ ಜಿಲ್ಲೆಗೆ ಕಳಂಕ ಬಾರದ ರೀತಿಯಲ್ಲಿ, ಎಲ್ಲ ಧರ್ಮೀಯರೂ ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆ ಬಾರದ ರೀತಿ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಬೇಕು.
ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಮಾಡಬೇಕು. ಪಿ ಓ ಪಿ ಯಿಂದ ತಯಾರಿಸಿದ ವಿಗ್ರಹಗಳನ್ನು, ರಾಸಾಯನಿಕ ಮುಕ್ತ ವಿಗ್ರಹಗಳನ್ನು ಬಳಸಬೇಕು.ಆಸ್ಪತ್ರೆ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.
ಗಣೇಶ ಪ್ರತಿಷಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ ಮುಂತಾದ ಪರವಾನಿಗೆಗಳನ್ನು ಎಲ್ಲಾ ತಹಸೀಲ್ದಾರ್ ಕಚೇರಿಯಲ್ಲಿ ಏಕಗವಾಕ್ಷಿ ಪದ್ಧತಿಯಡಿ ಪಡೆದುಕೊಳ್ಳಬೇಕು. ಶುಭಾಶಯ ಕೋರುವ ಬ್ಯಾನರ್, ಬಂಟಿಂಗಗಳನ್ನು ಆಳವಡಿಸಲು ಆಯಾ ಸ್ಥಳೀಯ ಪ್ರಾಧಿಕಾರದಿಂದ ತಪ್ಪದೇ ಅನುಮತಿ ಪಡೆದುಕೊಳ್ಳಬೇಕು. ಪೆಂಡಾಲುಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಪರವಾನಿಗೆ ಪಡೆಯಬೇಕು ಎಂದರು.
ಗಣೇಶ ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷಧಿಸಿ ಆದೇಶ ಹೊರಡಿಸಲಾಗುವುದು ಎಂದರು.
ರಸ್ತೆಯಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕರಿಗೆ ಹಾಗೂ ಅಂಬ್ಯುಲೆನ್ಸ್, ಅಗ್ನಿ ಶಾಮಕ ವಾಹನಗಳ ಓಡಾಟಕ್ಕೆ ತೊಂದರೆ ಮಾಡಲು ಅವಕಾಶವಿರುವುದಿಲ್ಲ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪ್ರತಿಷಪನೆ ಮಾಡಬೇಕು ಎಂದರು.
ಕೋಲಾರ ಜಿಲ್ಲೆಯ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಮುಂದೆಯು ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿಯಿಂದ ನೆರವೇರಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷಧಿಕಾರಿಗಳಾದ ನಿಖಿಲ್. ಬಿ ಅವರು ಮಾತನಾಡಿ, ಗಣೇಶ ಪ್ರತಿಷಪನೆಯ ಪೆಂಡಾಲ್‌ಗಳಲ್ಲಿ ಅಗ್ನಿನಂದಕಗಳನ್ನು ಬಳಕೆ ಮಾಡಬೇಕು, ಪೆಂಡಾಲ್‌ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಪೆಂಡಾಲ್‌ನಲ್ಲಿ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರ ಮಾರ್ಗ ನಿರ್ಮಿಸಬೇಕು. ಗಣೇಶ ಪ್ರತಿಷಪಣಾ ಮಂಡಳಿಯವರು ಮೂರ್ತಿಗಳ ವಿಸರ್ಜನೆ, ಮೇರವಣಿಗೆ ಮಾಡುವ ಮಾರ್ಗವನ್ನು ಮುಂಚಿತವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಿಳಿಸಿ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದುಕೊಳ್ಳಬೇಕು.
ಪರವಾನಿಗೆ ಪಡೆದ ಮಾರ್ಗವನ್ನು ಯಾವುದೇ ಕಾರಣಕ್ಕೂ ಬದಲಾವಣೆಯನ್ನು ಮಾಡುವಂತಿಲ್ಲ. ಗಣೇಶ ಮೂರ್ತಿಯ ಪ್ರತಿಷಪನೆ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಎಲ್ಲರೂ ಶಾಂತಿ, ಸಂಯಮದಿಂದ ವರ್ತಿಸಿ, ಕಾನೂನು ಸುವ್ಯವಸ್ಥೆ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ಸೂಚನೆ ಸಿಕ್ಕ ತಕ್ಷಣವೇ ಪೊಲೀಸ್ ಸಹಾಯವಾಣಿ ೧೧೨ ಗೆ ಕರೆ ಮಾಡಿ ತಿಳಿಸಬೇಬೇಕು. ಈದ್ ಮಿಲಾದ್ ಹಬ್ಬವನ್ನು ಸಹ ಶಾಂತಿಯುತವಾಗಿ ಆಚರಿಸಬೇಕು ಎಂದರು.
ಕೆ. ಜಿ. ಎಫ್ ಪೊಲೀಸ್ ಅಧೀಕ್ಷಕರಾದ ಶಾಂತಕುಮಾರ್ ಅವರು ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಎಲ್ಲರೂ ಶಾಂತಿ, ಸೌಹಾರ್ದಯಿಂದ ಬಾಳುತ್ತಿದ್ದೇವೆ. ಎಲ್ಲಾ ಹಬ್ಬಗಳನ್ನು ಹಿಂದೂ-ಮುಸ್ಲಿಂ ಒಗ್ಗೂಡಿಕೊಂಡು ಆಚರಿಸುತ್ತೇವೆ ಅದರಂತೆ ಈ ಎರಡೂ ಹಬ್ಬಗಳನ್ನು ಶಾಂತಿ ಪಾಲನೆ ಜೊತೆಗೆ ಸಡಗರ ಸಂಭ್ರಮದಿಂದ ಆಚರಿಸುತ್ತೇವೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಅಪರ ಜಿಲ್ಲಾ ಪೊಲೀಸ್ ವರಿಷಧಿಕಾರಿಗಳಾದ ಹೆಚ್.ಸಿ ಜಗದೀಶ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕರು, ಪರಿಸರ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲಾ ತಹಶಿಲ್ದಾರರು, ಪೊಲೀಸ್ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ, ಗಣೇಶ ಮಂಡಳಿಯ ಮುಖ್ಯಸ್ಥರು ಮತ್ತು ಮತ್ತಿತರರಿದ್ದರು.