ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.29:- ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಖಂಡಿಸಿ ಮಹಿಳೋದಯ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದರೂ ಕಾರ್ಯ ನಿರ್ವಹಣೆಯಲ್ಲಿ ವಿಫಲತೆವಾಗಿವೆ. ಕೆಲ ದಿನಗಳ ಹಿಂದೆ, ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿನ ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣ ನಾಗರಿಕ ಸಮಾಜವೇ ನಾಚಿಕೆಪಡುವಂತಾಗಿದೆ.
ಜನ ಸೇವೆ ಮಾಡುತ್ತಿರುವ ವೇಳೆಯಲ್ಲಿ ವೈದ್ಯರ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವುದು ಖಂಡನೀಯ. ಜತೆಗೆ ಉತ್ತರಖಂಡದ ಡೆಹ್ರಾಡೂನ್ ಬಸ್ ನಿಲ್ದಾಣದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವುದು ಹೇಯ ಕೃತ್ಯ ಎಂದು ಕಿಡಿ ಕಾರಿದರು.
ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಅರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಮರಣ ದಂಡನೆ ವಿಧಿಸಬೇಕು. ಮಹಿಳೆಯರ ಮೇಲಿನ ಹೀನಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಬೇಕು. ಎಲ್ಲಾ ಹೆಣ್ಣುಮಕ್ಕಳ ವಸತಿ ನಿಲಯಗಳ ಬಳಿ ಸೂಕ್ತ ಭದ್ರತೆ ಒದಗಿಸಬೇಕು. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳ ಕುರಿತು ರಾಜ್ಯ, ಕೇಂದ್ರ ಸರ್ಕಾರಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಕೋರ್ಟ್‍ಗಳಲ್ಲಿ ಮಹಿಳೆಯರ ಮೇಲಿನ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಬೇಕು. ಮಹಿಳೆಯರು ನಿರ್ಭೀತಿಯಿಂದ ಜೀವಿಸಲು ಕಾನೂನು ರೀತಿಯಲ್ಲಿ ಸೂಕ್ತ ರಕ್ಷಣೆ ನೀಡಬೇಕು. ಅತ್ಯಾಚಾರಿಗಳಿಗೆ ವಿಧಿಸುವ ಶಿಕ್ಷೆಯನ್ನು ಕಠಿಣಗೊಳಿಸಬೇಕು. ಈಗಿರುವ ಶಿಕ್ಷೆಯ ವಿಧಾನ ಬದಲಿಸಿ ಶೀಘ್ರದಲ್ಲಿ ತೀರ್ಪು ನೀಡಿ ಅತ್ಯಾಚಾರಿಗಳನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಲಯ ಸಂಯೋಜಕಿ ಆರೋಕ್ಯ ಮೇರಿ, ಸಾವಿತ್ರಿ, ಮೋಲಿ ಪೊಟಾಡೊ, ಪ್ರಕಾಶ್ ಮೇರಿ, ಮೇರಿ ಕ್ರಿಸ್ಟೀನಾ, ಸ್ಟೆಲ್ಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.