ಪಿ.ಎಸ್.ಐ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ:ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಡಿಸಿ ಸೂಚನೆ
ವಿಜಯಪುರ, ಅ.2: ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಕೇಂದ್ರಗಳಲ್ಲಿ ಅ.3ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10-30ರಿಂದ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ 2 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.
ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಂತೆ ನಿಗಾ ವಹಿಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‍ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಾಗಳ ವೀಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು ಎಂದು ಹೇಳಿದರು.
ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಖಜಾನೆ ಇಲಾಖೆಯ ಉಪನಿರ್ದೇಶಕ ಹನಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.