ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಡಿಸಿ ಟಿ. ಭೂಬಾಲನ್ ಕರೆ
ವಿಜಯಪುರ,ಆ.27: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕೂಡ ಕಳುಹಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೌಢ ಶಾಲಾ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, (2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, (3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, (4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, (2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, (3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, (4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ : 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, (2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, (3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, (4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, (5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು ಕುರಿತಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು ಎಂದವರು ಹೇಳಿದ್ದಾರೆ.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ತಲಾ ಮೂರು ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.
ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ, ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ, ಆಧಾರ ಗ್ರಂಥಗಳು, ಮೊಬೈಲ್‍ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ ಎಂದು ತಿಳಿಸಿದ್ದಾರೆ.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ ಅತ್ಯುತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಿ 12-09-2024ರೊಳಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯ ಮೂಲಕ ಕರೆ ನೀಡಿದ್ದಾರೆ.