ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ 27 ರಂದು ರಾಜ್ಯ ಭವನ ಚಲೋ
ಕಲಬುರಗಿ,ಆ.24-ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು. ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು, ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು, ಕನ್ನಡ ನಾಡಿನ ಘನತೆಯನ್ನು ಕಾಪಾಡಬೇಕೆಂದು ಆಗ್ರಹಿಸಿ ಆ.27 ರಂದು ಬೆಳಿಗ್ಗೆ 11:00 ಗಂಟೆಗೆ ರಾಜ ಭವನ ಚಲೋ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಮಹಾಂತೇಶ ಕೌಲಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರಾದ ತಾವರೆ ಚಂದ ಗೆಹೊಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೆ ಅಲ್ಲ, ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ- ಷಡ್ಯಂತ್ರಗಳ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದರು.
ಕರ್ನಾಟಕ ಲೋಕಾಯುಕ್ತ, ಎಸ್‍ಐಟಿ ಮುಂತಾದ ತನಿಖಾ ಸಂಸ್ಥೆಗಳೂ ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಭೀಕರ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡಿ ಎಂದು ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಈ ರಾಜ್ಯಪಾಲರು ಈ ಕೋರಿಕೆಗಳನ್ನು ಕಸದ ಬುಟ್ಟಿಗೆ ಎಸೆದು ಪಕ್ಷಪಾತ ಮಾಡಿದ್ದಾರೆ. ಇದುವರೆಗೆ ಒಬ್ಬರ ಮೇಲೂ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದರು.
27ರ ಪ್ರತಿಭಟನಾ ಕಾರ್ಯಕ್ರಮದಲ್ಲಿ ನಾಡಿನ ಪ್ರಜ್ಞಾವಂತರು, ಪ್ರಗತಿಪರರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಸುನೀಲ ಮಾರುತಿ ಮಾನಪಡೆ, ಜಿಲ್ಲಾ ಅಧ್ಯಕ್ಷ ನಾಗೇಂದ್ರ ಜವಳಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಆದರ್ಶ ಯಲ್ಲಪ್ಪ, ಜಿಲ್ಲಾ ಸಂಚಾಲಕ ಅರ್ಜುನ ಗೊಬ್ಬರ, ಅಲೆಮಾರಿ ಸಂಘಟನೆಗಳ ಒಕ್ಕೂಟದ ಬಿ.ಹೆಚ್.ಮಂಜುನಾಥ, ವಿದ್ಯಾರ್ಥಿ ಬಂಧುತ್ವ ವೇದಿಕೆಯ ದಿನೇಶ ದೊಡ್ಡಮನಿ, ಪರಿಶಿಷ್ಟ ಪಂಗಡ ಮುಖಂಡ ಶಿವರಾಜ ಸುಬೇದಾರ, ಅಲ್ಪಸಂಖ್ಯಾತ ಮುಖಂಡ ಮಹಿಬೂಬ್ ಶಾಹ್ ದರವೇಶಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.