ಗಾಂಧಿ ಭವನದಲ್ಲಿ ಗಾಂಧಿಜೀ, ಶಾಸ್ತ್ರೀಜೀ ಜಯಂತಿ, ಸ್ವಚ್ಛತಾ ನಡಿಗೆ, ಸರ್ವಧರ್ಮ ಪ್ರಾರ್ಥನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಅ.೨; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಾಮನಗರದಲ್ಲಿನ  ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 155 ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆ  ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಗಾಂಧಿಜೀ ವೇಷಧಾರಿಯೊಂದಿಗೆ ಜಿಲ್ಲಾಡಳಿತ ಅಧಿಕಾರಿಗಳು ಭಾವಚಿತ್ರ ತೆಗೆಸಿಕೊಂಡರು.ನಂತರ ಜಿಲ್ಲಾಧಿಕಾರಿಗಳು ಸ್ವಚ್ಛತಾ ನಡಿಗೆಗೆ ಚಾಲನೆ ನೀಡಿದರು. ಸ್ವಚ್ಛತಾ ನಡಿಗೆಯ ನಂತರ ಸ್ವಚ್ಛತೆಯ ಶ್ರಮಾದಾನ ನಡೆಯಿತು. ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.ನಂತರ ವೇದಿಕೆಯಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಇದಾದ ನಂತರ ಗಾಂಧಿ ಭವನದ ಸಭಾಂಗಣದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಜನ್ ಗೀತೆಗಳು, ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ, ವಿದ್ಯಾಥಿಗಳಿಂದ ಗಾಂಧಿ ಕುರಿತು ಭಾಷಣ ನಡೆಯಿತು.ಈ ವೇಳೆ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.