ಆಡಿದ ಮಾತು ಉಳಿಸಿಕೊಳ್ಳುವುದೇ ನಿಜವಾದ ಧರ್ಮ
ಸಂಜೆವಾಣಿ ವಾರ್ತೆ
ಬಾಳೆಹೊನ್ನೂರು.ಆ.೨೦;ಮಾತೆಂಬುದು ಸಾಮಾನ್ಯವಾದುದಲ್ಲ. ಅರಿವಿನ ಆಚಾರ ಬದುಕಿನ ಉನ್ನತಿಗೆ ಸೋಪಾನ. ಆಡುವ ಮಾತು ನಡೆಯುವ ದಾರಿ ಇನ್ನೊಂದು ಆಗಬಾರದು. ಆಡಿದ ಮಾತಿನಂತೆ ನಡೆದುಕೊಳ್ಳುವುದೇ ನಿಜವಾದ ಧರ್ಮ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು  ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಶ್ರಾವಣ ಇಷ್ಟಲಿಂಗ ಮಹಾಪೂಜಾ ಹಾಗೂ ನೂಲ ಹುಣ್ಣಿಮೆಯ ಪುರಾಣ ಪ್ರವಚನ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ನದಿಯ ನೀರನ್ನು ಎಷ್ಟು ತುಂಬಿದರೂ ಅದು ಹೇಗೆ ಖಾಲಿಯಾಗುವುದಿಲ್ಲವೋ ಹಾಗೆಯೇ ಧರ್ಮದ ಅರಿವನ್ನು ಎಷ್ಟು ಅರಿತರೂ ಅದು ಖಾಲಿಯಾಗುವುದಿಲ್ಲ. ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯಲಾರವು. ಜನರು ಯತಾರ್ಥ ಅರಿತು ಸಾತ್ವಿಕ ಸಮೃದ್ಧ ನಾಡನ್ನು ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೆ ವಿನಾ ಜನರನ್ನು ನಾಸ್ತಿಕರನ್ನಾಗಿ ಮಾಡುವ ಪ್ರಯತ್ನವನ್ನು ಯಾರೂ ಮಾಡಬಾರದು. ಮಾನವನಿಗೆ ಉತ್ತಮ ಸಂಸ್ಕಾರ ದೊರೆತರೆ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ನೀಡಿದ ವಿಶ್ವ ಬಂಧುತ್ವದ ಶಾಂತಿ ಸಾಮರಸ್ಯದ ಸಂದೇಶ ಸಕಲ ಜೀವಾತ್ಮರ ಶ್ರೇಯೋಭಿವೃದ್ಧಿಗೆ ಸ್ಫೂರ್ತಿಯಾಗಿದೆ ಎಂದರು.