ವೈದ್ಯೆ ಅತ್ಯಾಚಾರ, ಹತ್ಯೆ ಖಂಡಿಸಿ ಎಐಡಿಎಸ್‍ಒ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.20:- ಕೊಲ್ಕತ್ತಾದ ಆರ್.ಜಿ.ಕರ್ ಆಸ್ಪತ್ರೆಯ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಎಐಡಿಎಸ್‍ಒ ವತಿಯಿಂದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಮ್ಮ ಸಮಾಜ ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿವೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ 3 ಜನ ಶಾಲಾ ಮಕ್ಕಳು 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕೊಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಕಾಮುಕನಿಗೆ ಬಲಿಯಾಗಿ ಘೋರ ಸಾವಿಗೀಡಾದ ವೈದ್ಯೆ ಈ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ. ನಾಗರಿಕ ಸಮಾಜವು ತಲೆತಗ್ಗಿಸುವಂತೆ ಮಾಡಿರುವ ಈ ಅತ್ಯಾಚಾರದ ಮಾರಿ ತೀವ್ರವಾಗಿ ಎಲ್ಲೆಡೆ ಹಬ್ಬುತ್ತಿದೆ. ಈ ಮಾರಿಯ ಮೂಲ ಅಡಗಿರುವುದು ಇಂದಿನ ಸಾಂಸ್ಕೃತಿಕ ಅಧಃಪತನದಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ದ ಈಗಾಗಲೇ ಜನರು ಬೀದಿಗಿಳಿದಿದ್ದಾರೆ. ಈ ಘಟನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸುವ ಹೀನ ಪ್ರಯತ್ನವನ್ನು ಆಡಳಿತಾರೂಢ ಟಿಎಂಸಿ ಸೇರಿದಂತೆ ಪಟ್ಟಭದ್ರರು ನಡೆಸುತ್ತಿದ್ದಾರೆ. ಆದರೆ, ಸರಿಯಾದ ದಾರಿಯಲ್ಲಿ ಮುನ್ನಡೆದು ಸಂಘಟಿತ ಹೋರಾಟ ನಡೆಸುವುದರಿಂದ ಮಾತ್ರ ಪರಿಹಾರ ಸಾಧ್ಯ. ಇಂದು ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ ಮತ್ತು ಪೆÇೀರ್ನ್ ವೆಬ್ ಸೈಟ್‍ಗಳು ಸಮಾಜದ ಸ್ವಾಸ್ಥ್ಯ ಹಾಳುಗೆಡವಿ ಸಾಂಸ್ಕೃತಿಕ ಅಧಃಪತನಕ್ಕೆ ಕಾರಣವಾಗಿವೆ. ಕೂಡಲೇ ಕರ್ತವ್ಯ ನಿರತ ಎಲ್ಲಾ ಮಹಿಳೆಯರಿಗೂ ಸೂಕ್ತ ಭದ್ರತೆ ಒದಗಿಸಬೇಕು. ಈ ಕೃತ್ಯ ಎಸಗಿರುವ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ಸುಮಾ, ಪದಾಧಿಕಾರಿಗಳಾದ ಸೀಮಾ ನೀತು ಶ್ರೀ, ಪುಷ್ಪ, ನಿತಿನ್ ಸ್ವಾತಿ, ಚಂದನ, ಚಂದ್ರಿಕಾ, ಹೇಮ, ದಿಶಾ, ಅಂಜಲಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.