ರಾಜ್ಯಪಾಲರ ವಿರುದ್ದ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.20-ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯಪಾಲರು, ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಾತನಾಡಿ ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವುದನ್ನು ಸಹಿಸದ ವಿರೋಧ ಪಕ್ಷಗಳು ರಾಜಕೀಯ ಷಡ್ಯಂತ್ರ ನಡೆಸುತ್ತಿವೆ. ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರ ಎಂದು ಆರೋಪಿಸಿದರು.
ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಲೋಕಾಯುಕ್ತ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಕೇಳಿದ್ದಾರೆ, ಆದರೆ ಇಲ್ಲಯ ತನಕ ಪ್ರಾಸಿಕ್ಯೂಸನ್‍ಗೆ ಅನುಮತಿ ನೀಡಿಲ್ಲ ಎಂದರು. ಯಾವುದೇ ಕಾರಣವಿಲ್ಲದೇ ತನಿಖೆಯಾಗದೇ ನೋಟಿಸ್ ನೀಡಿರುವುದು ಖಂಡನೀಯ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಪರ ಕೆಲಸ ಮಾಡುತ್ತಿದೆ, ಇದನ್ನು ಸಹಿಸದೇ ಪಿತೂರಿ ನಡೆಸುತ್ತಿರುವ ಕೆಂದ್ರ ಸರ್ಕಾರ, ರಾಜ್ಯದ ಬಿಜೆಪಿ ಜೆಡಿಎಸ್ ನಾಯಕರ ವಿರುದ್ದ ಹೋರಾಟ ಅನಿವಾರ್ಯ, ಅಲ್ಲದೇ ಎಲ್ಲರ ವಿರುದ್ದ ತನಿಖೆ ನಡೆಸಬೇಕೆಂದು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ ಪ್ರಸಾದ್, ಸಂಸದ ಸುನೀಲ್ ಬೋಸ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪಿ.ಮರಿಸ್ವಾಮಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ಜಿಲ್ಲಾ ಗ್ಯಾರಂಟೀ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಮಾಜಿ ಸಂಸದ ಎಂ.ಶಿವಣ್ಣ, ಮಾಜಿ ಶಾಸಕ ಆರ್. ನರೇಂದ್ರ, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ, ಗುಂಡ್ಲುಪೇಟೆ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಬಸವರಾಜು, ಮುಖಂಡರಾದ ಕೆರಹಳ್ಳಿ ನವೀನ್, ಆರ್.ಮಹದೇವು, ಚಿಕ್ಕಮಹದೇವು, ಬಸವನಪುರ ರಾಜಸೇಖರ್, ಬದನಗುಪ್ಪೆ ಎಪಿಎಂಸಿ ನಿರ್ದೆಶಕ ಗುರುಸ್ವಾಮಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.