ಪೊಲೀಸರಿಂದ ಯುವಕನ ಮೇಲೆ ಹಲ್ಲೆ
ಕಲಬುರಗಿ,ಆ.19-ಯುವಕೊಬ್ಬನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದೆ.
10-15 ಜನ ಪೊಲೀಸರು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸ್ಥಳಿಯರ ಮೊಬೈಲ್‍ನಲ್ಲಿ ಸೆರೆಯಾಗಿದೆ.
ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಟ್ರ್ಯಾಕ್ಟರ್ ಸ್ಪರ್ಧೆ ಆಯೋಜಿಸಲಾಗಿತ್ತು. ಸೊನ್ನ ಮತ್ತು ಮಾವನೂರ ಗ್ರಾಮದವರ ಮಧ್ಯೆ ನಡೆದ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇಬ್ಬರನ್ನು ನಿರ್ಣಾಯಕರು ಅನರ್ಹಗೊಳಿಸಿದ್ದರು. ಬಳಿಕ ಸ್ಪರ್ಧೆ ಮುಗಿಯುವ ಹಂತಕ್ಕೆ ಬಂದಾಗ ಪೊಲೀಸರು ಮತ್ತು ಯುವಕನ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರೆಲ್ಲ ಒಟ್ಟುಗೂಡಿ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.