ರಾಜ್ಯಪಾಲರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.19:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ನಗರದ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ರಾಜ್ಯಪಾಲರು ಕಾನೂನು ಪಾಲನೆ ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಜೆಡಿಎಸ್, ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡಿದ್ದಾರೆ. ಅದು ಫಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು ಮತ್ತು ಭಾಗ್ಯಗಳ ಮುಖ್ಯಮಂತ್ರಿಗಳು ಬಡವರ ಪರವಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಸಹಿಸಲಾಗದೇ ಹುನ್ನಾರ ನಡೆಸಿದ್ದಾರೆ. ರಾಜ್ಯದ ಎಲ್ಲ ಮಹಿಳೆಯರು ಸಿದ್ದರಾಮಯ್ಯ ಪರವಾಗಿದ್ದೇವೆ. ರಕ್ತ ಕೊಟ್ಟೆವು, ಪ್ರಾಣ ಬಿಟ್ಟರೂ ಅವರು ಸೋಲಲು ಬಿಡುವುದಿಲ್ಲ ಎಂದು ಎಂದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ, ಜೆಡಿಎಸ್ ವಿರುದ್ಧದ ಈ ಹೋರಾಟದಲ್ಲಿ ಗೆಲ್ಲುವುದು ನೂರಕ್ಕೆ ನೂರು ಗ್ಯಾರಂಟಿ. ಯಾವತ್ತೂ ಸತ್ಯವೇ ಗೆಲ್ಲಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳಲು ಬಿಜೆಪಿ, ಜೆಡಿಎಸ್ ನಾಯಕರಿಗೆ ನೈತಿಕತೆ ಇಲ್ಲ. ರಾಜ್ಯಪಾಲರು ಮತ್ತು ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ರಾಜ್ಯಪಾಲರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ನಾಯಕರು ಯಾವಾಗ ಪಾದಯಾತ್ರೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಯಾವಾಗ ಅನುಮತಿ ಕೊಡುತ್ತಾರೆ? ಸಿದ್ದರಾಮಯ್ಯ ಪ್ರಕರಣದಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಂತೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನಗಳು ಬೇಕು? ಬಿಜೆಪಿ, ಜೆಡಿಎಸ್ ನಾಯಕರ ಹೋರಾಟದಲ್ಲಿ ಬಡವರ ಪರವಾದ ಕಾಳಜಿ ಇಲ್ಲ. ಕಾಂಗ್ರೆಸ್ ಸರ್ಕಾರದ ಬಡವರ ಪರವಾದ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ನಾಡಿನ ರೈತರು, ಮಹಿಳೆಯರು, ದಲಿತರು, ಹಿಂದುಳಿದ ವರ್ಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಪುಷ್ಪಾವಲ್ಲಿ, ಲತಾಸಿದ್ದಶೆಟ್ಟಿ, ಲತಾ ಮೋಹನ್, ಮಂಜುಳಾ, ರಾಜೇಶ್ವರಿ, ಭವ್ಯ, ನಾಗರತ್ನ, ರಾಧಾಮಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.